ರಾಜ್ಯದಲ್ಲಿ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರಾಟ ಮತ್ತು ಉತ್ಪಾದನಾ ಘಟಕಗಳ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕಠಿಣ ಕ್ರಮ ಕೈಗೊಳ್ಳುತ್ತಿದೆ. ನಿಯಮಗಳನ್ನು ಪಾಲಿಸದ ಹಾಗೂ ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಮಾನದಂಡಗಳನ್ನು ಪೂರೈಸದ ನೀರಿನ ಘಟಕಗಳ ಮೇಲೆ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದು, ಒಟ್ಟು 102 ಘಟಕಗಳಿಗೆ ಅನುಮತಿ ನಿರಾಕರಿಸಲಾಗಿದೆ. ರಾಜ್ಯದಲ್ಲಿರುವ ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಸಮಗ್ರ ಪರಿಶೀಲನೆ ನಡೆಸಿದ ಬಳಿಕ ಆಹಾರ ಸುರಕ್ಷತಾ ಇಲಾಖೆ ಈ ಮಹತ್ವದ ಕ್ರಮ ಕೈಗೊಂಡಿದೆ.
ಪರಿಶೀಲನೆ ವೇಳೆ ನಿಯಮಾನುಸಾರ ಕಾರ್ಯನಿರ್ವಹಿಸುತ್ತಿರುವ ಘಟಕಗಳಿಗೆ ಅನುಮತಿ ನೀಡಲಾಗಿದ್ದು, ಕೆಲವು ಘಟಕಗಳ ಪರವಾನಗಿ ನವೀಕರಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ ಒಟ್ಟು 12 ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳಿಗೆ ಅನುಮತಿ ನೀಡಲಾಗಿದೆ. ಇದರ ಜೊತೆಗೆ 57 ಘಟಕಗಳ ಪರವಾನಗಿ ನವೀಕರಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದರೆ, ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ 37 ಘಟಕಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳು ಸಜ್ಜಾಗಿದ್ದಾರೆ.



















