ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದ್ದು, ನವೆಂಬರ್ 4 ಮತ್ತು 5ರಂದು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನವೆಂಬರ್ 4ರಂದು ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲೂ ನವೆಂಬರ್ 5ರವರೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳದಲ್ಲಿ ಸಾಧಾರಣ ಮಳೆಯಾಗಲಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.



















