ನಂದಿನಿ ಹಾಲಿನ ದರ ಹಾಗೂ ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಜನವಿರೋಧಿ ನಿರ್ಧಾರವನ್ನು ಖಂಡಿಸಿ, ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ವತಿಯಿಂದ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರವು ನವೆಂಬರ್ 1ರಿಂದ ನಂದಿನಿ ಹಾಲಿನ ದರವನ್ನು ಹಾಗೂ ನವೆಂಬರ್ 5ರಿಂದ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದು ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ ಹಾಗೂ ಜೀವನ ನಿರ್ವಹಣೆಯ ವೆಚ್ಚದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರು, ಮಧ್ಯಮ ವರ್ಗದವರು, ಸಾಮಾನ್ಯ ಜನರು ಮತ್ತು ರೈತರಿಗೆ ಮತ್ತಷ್ಟು ಹೊರೆಯಾಗಿದೆ.
ರೈತರಿಗೆ ಹಾಲಿನ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ನ್ಯಾಯಯುತ ಬೆಲೆ ನೀಡುವಲ್ಲಿ ವಿಫಲವಾಗಿರುವ ಹಾಲು ಒಕ್ಕೂಟಗಳ ಆಡಳಿತಾತ್ಮಕ ಅವ್ಯವಹಾರ, ಅಕ್ರಮ ಹಾಗೂ ಭ್ರಷ್ಟಾಚಾರಗಳನ್ನು ಸರಿಪಡಿಸುವ ಬದಲು ಹಾಲಿನ ದರ ಏರಿಕೆ ಮೂಲಕ ಗ್ರಾಹಕರ ಮೇಲೆ ಹೊರೆ ಹಾಕುತ್ತಿರುವುದು ಖಂಡನೀಯ. ಅದೇ ರೀತಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳಲ್ಲಿನ ಭ್ರಷ್ಟಾಚಾರ, ಅವ್ಯವಹಾರ, ಅನಗತ್ಯ ವೆಚ್ಚ ಹಾಗೂ ಆಡಳಿತಾತ್ಮಕ ಲೋಪಗಳನ್ನು ಸರಿಪಡಿಸಿ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸುವ ಬದಲು ಪ್ರಯಾಣ ದರ ಏರಿಕೆ ಮಾಡಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ.
ಸರ್ಕಾರ ತನ್ನ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ, ಭ್ರಷ್ಟಾಚಾರವನ್ನು ನಿಯಂತ್ರಿಸಿ, ಸಾರ್ವಜನಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಕ್ರೋಢೀಕರಿಸುವ ಮೂಲಕ ಸಾರಿಗೆ ಸಂಸ್ಥೆಗಳನ್ನು ಮತ್ತು ಹಾಲು ಒಕ್ಕೂಟಗಳನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು. ಜನಸಾಮಾನ್ಯರ ಬದುಕಿನ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹಾಕುತ್ತಿರುವ ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ ನಂತರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ರಾಜ್ಯ ಸರ್ಕಾರಕ್ಕೆ ತಲುಪಿಸುವಂತೆ ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆಯನ್ನು ಹಿಂಪಡೆಯಬೇಕು ಹಾಗೂ ಭ್ರಷ್ಟಾಚಾರ ನಿಯಂತ್ರಣದ ಮೂಲಕ ಅಗತ್ಯ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕು ಎಂಬ ಬೇಡಿಕೆಗಳನ್ನು ಒಳಗೊಂಡ ಆಗ್ರಹ ಪತ್ರವನ್ನು ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಆರೋಗ್ಯ ಸ್ವಾಮಿ, ಕೃಷ್ಣ ವಿ.ಬಿ., ಆನಂದ, ರಘುನಂದನ, ಹಬೀಬ್ ಸಾಬ್, ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸದಸ್ಯರಾದ ಮೋಹನ್, ಶ್ರೀನಿವಾಸನ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಧನಂಜಯ ಎಂ., ಬೆಂಗಳೂರು ಪಶ್ಚಿಮ ಜಿಲ್ಲಾಧ್ಯಕ್ಷ ದೇವರಾಜ್ ಆರ್., ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಶಿಕುಮಾರ್, ರಾಜ್ಯ ಎಸ್‌ಸಿ/ಎಸ್‌ಟಿ ಘಟಕದ ಕಾರ್ಯದರ್ಶಿ ಹನುಸ್ವಾಮಿ ಸೇರಿದಂತೆ ಬೆಂಗಳೂರಿನ ವಿವಿಧ ಪದಾಧಿಕಾರಿಗಳು ಹಾಗೂ ಪಕ್ಷದ ಸೈನಿಕರು ಉಪಸ್ಥಿತರಿದ್ದರು.

















