ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ. ರಾಜ್ಯದ ಬಯಲು ಪ್ರದೇಶಗಳಲ್ಲಿ ದಾವಣಗೆರೆಯಲ್ಲಿ ಅತಿ ಕಡಿಮೆ 10.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ನವೆಂಬರ್ 13 ಮತ್ತು 14ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲೂ ಮಳೆಯಿಲ್ಲದ ವಾತಾವರಣದ ನಡುವೆ ಚಳಿ ಹೆಚ್ಚಾಗುವ ಲಕ್ಷಣಗಳು ಕಂಡುಬರುತ್ತಿವೆ.

















