ಬೆಂಗಳೂರು: ರಾಜ್ಯದ ಮೂಲಸೌಕರ್ಯ, ವಸತಿ, ಸಾರಿಗೆ, ಆರೋಗ್ಯ ಮತ್ತು ಕೃಷಿ ವಲಯಕ್ಕೆ ಸಂಬಂಧಿಸಿದ ಹಲವು ಮಹತ್ವದ ಯೋಜನೆಗಳಿಗೆ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೆಶಿಪ್-4 ಯೋಜನೆಯಡಿ 10,252.58 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ, ಒಂದು ಲಕ್ಷ ಹೊಸ ಮನೆಗಳ ನಿರ್ಮಾಣದೊಂದಿಗೆ ಸಹಾಯಧನ ಹೆಚ್ಚಳ, ವಿಶ್ವಬ್ಯಾಂಕ್ ನೆರವಿನೊಂದಿಗೆ 1,700 ಕೋಟಿ ರೂಪಾಯಿ ವೆಚ್ಚದ ವಿದ್ಯುತ್ ಬಸ್ ಯೋಜನೆ ಹಾಗೂ ಬೆಂಗಳೂರಿನ ತ್ಯಾಜ್ಯ ನಿರ್ವಹಣೆ ಮತ್ತು ರಸ್ತೆ ಅಭಿವೃದ್ಧಿಗೆ ಸಂಪುಟ ಆಡಳಿತಾತ್ಮಕ ಒಪ್ಪಿಗೆ ಸೂಚಿಸಿದೆ.
ವಸತಿ ಯೋಜನೆಗಳಿಗೆ ಉತ್ತೇಜನ ಮತ್ತು ಸಹಾಯಧನ ಹೆಚ್ಚಳ
ರಾಜ್ಯದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿ ಆಧಾರಿತವಾಗಿ ಒಂದು ಲಕ್ಷ ಹೊಸ ಮನೆಗಳನ್ನು ನಿರ್ಮಿಸುವ ಗುರಿಯನ್ನು ಜಾರಿಗೊಳಿಸಲು ಸಚಿವ ಸಂಪುಟ ತೀರ್ಮಾನಿಸಿದೆ. ಈ ಯೋಜನೆಯಡಿ ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ನೀಡಲಾಗುವ ಸಹಾಯಧನವನ್ನು 1.20 ಲಕ್ಷ ರೂಪಾಯಿಯಿಂದ 2 ಲಕ್ಷ ರೂಪಾಯಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಸಹಾಯಧನವನ್ನು 2 ಲಕ್ಷ ರೂಪಾಯಿಯಿಂದ 3 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಇದರೊಂದಿಗೆ, ಮುಖ್ಯಮಂತ್ರಿಯವರ ‘ನಮ್ಮ ಮನೆ’ ಯೋಜನೆಯಡಿ ರಾಜ್ಯಾದ್ಯಂತ ಶ್ರಮಿಕರಿಗೆ ಶೇ.50ರ ರಿಯಾಯಿತಿ ದರದಲ್ಲಿ 30×40 ಅಡಿ ಅಳತೆಯ 50 ಸಾವಿರ ನಿವೇಶನಗಳನ್ನು ಒದಗಿಸಲು ಸಂಪುಟ ಅನುಮೋದನೆ ನೀಡಿದೆ.
ಕೃಷಿ, ಬಡ್ಡಿ ಮನ್ನಾ ಹಾಗೂ ಶೈಕ್ಷಣಿಕ ನೆರವು
ರೈತರ ಆದಾಯ ಹೆಚ್ಚಿಸುವ ಹಾಗೂ ಕೃಷಿಯನ್ನು ಲಾಭದಾಯಕವಾಗಿಸುವ ಉದ್ದೇಶದಿಂದ 75 ಕೋಟಿ ರೂಪಾಯಿ ವೆಚ್ಚದಲ್ಲಿ ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಯೋಜನೆಯನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 7 ನಿಗಮಗಳು 2012-14ರಿಂದ 2020-21ನೇ ಸಾಲಿನವರೆಗೆ ನೀಡಿದ ಸಾಲದ ಅಸಲನ್ನು ಪೂರ್ಣವಾಗಿ ಮರುಪಾವತಿಸುವ ಫಲಾನುಭವಿಗಳಿಗೆ ಒಟ್ಟು 236.04 ಕೋಟಿ ರೂಪಾಯಿ ಬಡ್ಡಿ ಮನ್ನಾ ಮಾಡುವ ಒಂದಾವರ್ತಿ ತೀರುವಳಿ ಯೋಜನೆಗೂ ಸಂಪುಟ ಒಪ್ಪಿಗೆ ನೀಡಿದೆ. ಇದೇ ವೇಳೆ ಅಲ್ಪಸಂಖ್ಯಾತ ಸಮುದಾಯದ 5,000 ಬಡ ವಿದ್ಯಾರ್ಥಿಗಳಿಗೆ ಉನ್ನತ ಮತ್ತು ತಾಂತ್ರಿಕ ಶಿಕ್ಷಣಕ್ಕಾಗಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ಲ್ಯಾಪ್‌ಟಾಪ್ ವಿತರಿಸಲು ಹಾಗೂ 1.39 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮವಸ್ತ್ರ ಒದಗಿಸಲು 27.97 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ. ಭಾರತ್ ಜೋಡೋ ಯುವಸಂಘ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯಮಟ್ಟದ ಯುವ ಸಮಿತಿ ರಚಿಸಿ, ಪೂರ್ಣಾವಧಿ ಸಂಯೋಜಕರು ಮತ್ತು ಪ್ರೇರಕರನ್ನು ನೇಮಿಸಲು ತೀರ್ಮಾನಿಸಲಾಗಿದೆ.
ರಾಜ್ಯ ಹೆದ್ದಾರಿ, ವಿದ್ಯುತ್ ಬಸ್ ಮತ್ತು ಹಾಸನ ವಿಮಾನ ನಿಲ್ದಾಣ
ಕೆಶಿಪ್-4 (KSHIP-IV) ಯೋಜನೆಯಡಿ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 10,252.58 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಒಟ್ಟು 730.01 ಕಿ.ಮೀ. ಉದ್ದದ 9 ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಸಂಪುಟ ಅನುಮೋದನೆ ನೀಡಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಸಹಯೋಗದೊಂದಿಗೆ 1,700 ಕೋಟಿ ರೂಪಾಯಿ ವೆಚ್ಚದಲ್ಲಿ ‘ಕರ್ನಾಟಕ ವಿದ್ಯುತ್ ಬಸ್ ಕಾರ್ಯಕ್ರಮ’ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ ದೊರೆತಿದೆ. ಹಾಸನ ವಿಮಾನ ನಿಲ್ದಾಣ ಅಭಿವೃದ್ಧಿಯ ಯೋಜನಾ ವೆಚ್ಚವನ್ನು 193.65 ಕೋಟಿ ರೂಪಾಯಿಯಿಂದ 542.96 ಕೋಟಿ ರೂಪಾಯಿಗೆ ಪರಿಷ್ಕರಿಸಲಾಗಿದ್ದು, ಹೆಚ್ಚುವರಿ 349.31 ಕೋಟಿ ರೂಪಾಯಿ ಅನುದಾನ ಹಾಗೂ ಹೆಚ್ಚುವರಿ ಜಮೀನು ಸ್ವಾಧೀನಕ್ಕೆ ಅನುಮೋದನೆ ನೀಡಲಾಗಿದೆ.
ಬೆಂಗಳೂರು ರಸ್ತೆ ಅಭಿವೃದ್ಧಿ ಮತ್ತು ತ್ಯಾಜ್ಯ ನಿರ್ವಹಣೆ
ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ವತಿಯಿಂದ ಸಿಲ್ಕ್‌ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮೆಟ್ರೋ ನಿಲ್ದಾಣದವರೆಗಿನ ಹೊರವರ್ತುಲ ರಸ್ತೆಯನ್ನು ಜಾಗತಿಕ ಮಟ್ಟದಲ್ಲಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸುವ ಯೋಜನೆಯ 486.79 ಕೋಟಿ ರೂಪಾಯಿ ಪರಿಷ್ಕೃತ ಅಂದಾಜಿಗೆ ಹಾಗೂ 2026-27ರ ಹೊಸ ವೈಟ್ ಟಾಪಿಂಗ್ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಯಶವಂತಪುರದಿಂದ ಹಳೆ ಮದ್ರಾಸ್ ರಸ್ತೆ ಮತ್ತು ಮಾರೇನಹಳ್ಳಿ ಮುಖ್ಯರಸ್ತೆಯಿಂದ ಕನಕಪುರ ಮುಖ್ಯರಸ್ತೆವರೆಗೆ ‘ಸಿ’ ವರ್ಗದ ಎರಡು ಎಲೆವೇಟೆಡ್ ಕಾರಿಡಾರ್‌ಗಳ ನಿರ್ಮಾಣಕ್ಕೆ ನಿಧಿ ರಚಿಸುವ ಆದೇಶವನ್ನು ಮಾರ್ಪಾಡು ಮಾಡಲು ನಿರ್ಧರಿಸಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಸಿ, ಒಣ, ನೈರ್ಮಲ್ಯ ಮತ್ತು ರಸ್ತೆ ಗುಡಿಸುವಿಕೆ ತ್ಯಾಜ್ಯದ ಸಂಗ್ರಹಣೆ ಹಾಗೂ ಸಾಗಾಣಿಕೆಯ 10 ಪ್ಯಾಕೇಜ್‌ಗಳ 1,379.62 ಕೋಟಿ ರೂಪಾಯಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಇದರ ಜೊತೆಗೆ ಕರ್ನಾಟಕ ಗೃಹ ಮಂಡಳಿ ವತಿಯಿಂದ ಕೆಂಗೇರಿ ಬಳಿ ನಿರ್ಮಿಸಲಾಗುತ್ತಿರುವ ವಾಣಿಜ್ಯ ಸಂಕೀರ್ಣ ಮತ್ತು ಮಲ್ಟಿಫ್ಲೆಕ್ಸ್ ಕಟ್ಟಡದ ಎರಡನೇ ಹಂತದ ಕಾಮಗಾರಿಗೆ 68.50 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.
ಆರೋಗ್ಯ, ತುರ್ತು ಸೇವೆ ಮತ್ತು ಇತರ ಕಾಮಗಾರಿಗಳು
ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 71ರಲ್ಲಿರುವ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ಶಾಖೆ ಪ್ರಾರಂಭಿಸಲು ಹಾಗೂ ಹುಬ್ಬಳ್ಳಿಯ ಜಯದೇವ ಹೃದ್ರೋಗ ಕೇಂದ್ರಕ್ಕೆ 36.597 ಕೋಟಿ ರೂಪಾಯಿ ವೆಚ್ಚದಲ್ಲಿ ಹೆಚ್ಚುವರಿ ಉಪಕರಣ ಖರೀದಿಸಲು ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯದಲ್ಲಿ ಸುಟ್ಟುಗಾಯಗಳಿಂದ ಬದುಕುಳಿದವರ ತಡೆಗಟ್ಟುವಿಕೆ, ಚಿಕಿತ್ಸೆ, ಪುನರ್ವಸತಿ ಮತ್ತು ಸಾಮಾಜಿಕ ಪುನರ್ ಸಂಘಟನೆಯ ನೀತಿ-2025 ಜಾರಿಗೊಳಿಸಲು ನಿರ್ಧರಿಸಲಾಗಿದೆ.
ಬಹುಮಹಡಿ ಕಟ್ಟಡಗಳ ಅಗ್ನಿ ಅನಾಹುತ ತಡೆಗಟ್ಟಲು ಅಗ್ನಿಶಾಮಕ ಇಲಾಖೆಗೆ 52 ರಿಂದ 54 ಮೀಟರ್ ಎತ್ತರ ತಲುಪಬಲ್ಲ ಏರಿಯಲ್ ಲ್ಯಾಡರ್ ಪ್ಲಾಟ್‌ಫಾರಂ ವಾಹನವನ್ನು 16 ಕೋಟಿ ರೂಪಾಯಿ ವೆಚ್ಚದಲ್ಲಿ ಖರೀದಿಸಲು ಮತ್ತು ಪೊಲೀಸ್ ಪಡೆಗಳ ಆಧುನೀಕರಣ ಯೋಜನೆಯಡಿ 11 ಕೋಟಿ ರೂಪಾಯಿ ವೆಚ್ಚದಲ್ಲಿ 134 ತುರ್ತು ಸ್ಪಂದನಾ (ERSS) ವಾಹನಗಳನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ. ನೊಣವಿನಕೆರೆಯನ್ನು ಮೂಲವಾಗಿಟ್ಟುಕೊಂಡು ತಿಪಟೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೆಚ್ಚುವರಿ ಯೋಜನೆಗೆ 39.35 ಕೋಟಿ ರೂಪಾಯಿ ಹಾಗೂ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಪ್ರಜಾಸೌಧ ಕಟ್ಟಡದ ಎರಡನೇ ಹಂತದ ಕಾಮಗಾರಿಗೆ 5 ಕೋಟಿ ರೂಪಾಯಿ (ಮೊದಲ ಹಂತ 10 ಕೋಟಿ ರೂಪಾಯಿ) ಅಂದಾಜು ವೆಚ್ಚಕ್ಕೆ ಒಪ್ಪಿಗೆ ದೊರೆತಿದೆ.
ವಿಧಾನ ಮಂಡಲದಲ್ಲಿ ಮೂರು ತಿದ್ದುಪಡಿ ವಿಧೇಯಕಗಳ ಮಂಡನೆ
ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಲು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ-2026, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಮೂರನೇ ತಿದ್ದುಪಡಿ) ವಿಧೇಯಕ-2026 ಹಾಗೂ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ-1961ರ ಎರಡನೇ ತಿದ್ದುಪಡಿ ವಿಧೇಯಕ-2026ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.



















