ಎಸ್ಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ. 100 ರಷ್ಟು ಫಲಿತಾಂಶ ಸಾಧಿಸುವ ಹಾಗೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ‘ಮಿಷನ್-60+’ ಅಭಿಯಾನವು ಕೇವಲ ಫಲಿತಾಂಶ ಸುಧಾರಣೆಗೆ ಸೀಮಿತವಾಗಿಲ್ಲ; ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಿ ಅವರಲ್ಲಿ ಸಕಾರಾತ್ಮಕ ಬದಲಾವಣೆ ತರುವ ಗುರಿ ಹೊಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ 2026-27ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಸುಧಾರಣೆಗಾಗಿ ಕಲಬುರಗಿ ವಿಭಾಗ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕಾರ್ಯಾಗಾರದಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಅನುಷ್ಠಾನ ಅಧಿಕಾರಿಗಳು, ಪ್ರಾಂಶುಪಾಲರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ಎಲ್ಲಾ ಮಾಧ್ಯಮ ಮತ್ತು ವಿಷಯಗಳ ಶಿಕ್ಷಕರಿಗೆ ಫಲಿತಾಂಶ ಉತ್ತಮಪಡಿಸುವ ನಿಟ್ಟಿನಲ್ಲಿ ವಿಶೇಷ ತರಬೇತಿ ನೀಡಲಾಗುತ್ತಿದೆ.
ಕಳೆದ ಶೈಕ್ಷಣಿಕ ಸಾಲಿನಲ್ಲಿ ಶಿಕ್ಷಕರು ಹೆಚ್ಚುವರಿ ತರಗತಿಗಳನ್ನು ನಡೆಸಿ ಮಕ್ಕಳಿಗೆ ಪೂರಕ ಅವಕಾಶ ಕಲ್ಪಿಸಿದ್ದರಿಂದ ಉತ್ತಮ ಫಲಿತಾಂಶ ದಾಖಲಾಗಿತ್ತು. ಈ ಬಾರಿಯೂ ಅದೇ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸಿ ಶೇ. 100 ರಷ್ಟು ಫಲಿತಾಂಶ ಸಾಧಿಸುವ ಗುರಿ ಹೊಂದಬೇಕು ಎಂದರು. ಕಳೆದ ವರ್ಷ ಡಿಸೆಂಬರ್ ಕೊನೆಯಲ್ಲಿ ‘ಮಿಷನ್-40+’ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಈ ಬಾರಿ ಕಲಿಕಾ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಮುಂಚಿತವಾಗಿಯೇ ‘ಮಿಷನ್-60+’ ಆರಂಭಿಸಲಾಗಿದೆ. ಧಾರವಾಡದ ಐಐಟಿಯಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ಉದ್ಘಾಟನೆಯಾಗುವ ಮೊದಲೇ ರಾಯಚೂರು ಜಿಲ್ಲೆಯ ಶಿಕ್ಷಕರು ಫಲಿತಾಂಶ ಸುಧಾರಣೆಯ ಸಂಕಲ್ಪ ಮಾಡಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಬೋಧನೆಯೇತರ ಕೆಲಸಗಳಿಂದ ಮುಕ್ತಿ; 18 ಸಾವಿರ ಶಿಕ್ಷಕರ ನೇಮಕಾತಿ ಪ್ರಗತಿಯಲ್ಲಿ
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪರಿಶ್ರಮವೇ ಭದ್ರ ಬುನಾದಿಯಾಗಿದ್ದು, ಹಣದಿಂದ ಶಿಕ್ಷಣವನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದರು. ಶಿಕ್ಷಣ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುತ್ತಿದೆ. ಶಿಕ್ಷಕರನ್ನು ಬೋಧನೆಯೇತರ ಕೆಲಸಗಳಿಂದ ಮುಕ್ತಗೊಳಿಸಿ, ಅವರು ಸಂಪೂರ್ಣವಾಗಿ ಬೋಧನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದಿದ್ದ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಪ್ರಸ್ತುತ ಸುಮಾರು 18 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಮುಂದಿನ ಜೂನ್ ವೇಳೆಗೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಿ ಪಾಠ ಬೋಧನೆಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದರು.
ವೆಬ್ಕಾಸ್ಟಿಂಗ್ ವ್ಯವಸ್ಥೆ ಯಶಸ್ವಿ; ಬಂಗಾರಪ್ಪ ಅವರ ನಂಟು ಸ್ಮರಣೆ
ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಪರಿಚಯಿಸಲಾಗಿದೆ. ಆರಂಭದಲ್ಲಿ ಇದರಿಂದ ಫಲಿತಾಂಶದ ಮೇಲೆ ಪ್ರತಿಕೂಲ ಪರಿಣಾಮ ಬೀರಿದರೂ, ಈಗ ಈ ವ್ಯವಸ್ಥೆ ಯಶಸ್ವಿಯಾಗಿದೆ. ನಕಲು ತಡೆದು ವಿದ್ಯಾರ್ಥಿಗಳ ನೈಜ ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾಗಿ ಫಲಿತಾಂಶ ಹೊರಬರುವಂತಾಗಿದೆ ಎಂದು ಸಚಿವರು ಹೇಳಿದರು.
ಇದೇ ವೇಳೆ ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರಿಗೆ ರಾಯಚೂರು ಜಿಲ್ಲೆಯೊಂದಿಗೆ ಇದ್ದ ವಿಶೇಷ ನಂಟನ್ನು ಸ್ಮರಿಸಿದ ಸಚಿವರು, ಜಿಲ್ಲೆಯ ಎನ್. ಗಣೇಕಲ್ ಜಲಾಶಯಕ್ಕೆ ಇಲ್ಲಿನ ಜನರು ಬಂಗಾರಪ್ಪ ಜಲಾಶಯ ಎಂದು ಹೆಸರಿಟ್ಟಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಅವರು ಜಾರಿಗೆ ತಂದ ಗ್ರಾಮೀಣ ಕೃಪಾಂಕ ಯೋಜನೆಯಿಂದ ಅನೇಕರಿಗೆ ಅನುಕೂಲವಾಗಿದೆ ಎಂದರು. ಕಾರ್ಯಾಗಾರದಲ್ಲಿ ರೂಪುಗೊಳ್ಳುವ ಕಾರ್ಯತಂತ್ರಗಳು ಪ್ರತಿಯೊಂದು ಶಾಲೆಯಲ್ಲೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಎಸ್. ಭರತ್, ಕಲಬುರಗಿ ವಿಭಾಗದ ಅಪರ ಆಯುಕ್ತ ಅವಿನಾಶ್ ಶಿಂಧೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ನಿರ್ದೇಶಕಿ ಅನಿತಾ ನಜಾರೆ, ಕಲಬುರಗಿ ವಿಭಾಗದ ನಿರ್ದೇಶಕಿ ಮಗಳ ನಾಯಕ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿದ್ದರು.
ಏನಿದು ಮಿಷನ್-60+ ಅಭಿಯಾನ?
2025-26ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ‘ಮಿಷನ್-40+’ ಕಾರ್ಯಕ್ರಮ ಜಾರಿಗೆ ತಂದಿತ್ತು. ಇದೀಗ 2026-27ನೇ ಸಾಲಿನಲ್ಲಿ ಈ ಅಭಿಯಾನವನ್ನು ವಿಸ್ತರಿಸಿ ‘ಮಿಷನ್-60+’ ರೂಪಿಸಲಾಗಿದ್ದು, ಧಾರವಾಡದ ಐಐಟಿಯಲ್ಲಿ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಪರೀಕ್ಷೆಯಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕ ಗಳಿಸುವಂತೆ ಸಿದ್ಧಪಡಿಸುವುದು ಹಾಗೂ ಶಾಲಾ-ಕಾಲೇಜುಗಳಲ್ಲಿ ಶೇ. 100ರಷ್ಟು ಉತ್ತೀರ್ಣ ಫಲಿತಾಂಶ ದಾಖಲಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.


















