ಬೆಂಗಳೂರು: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳು ನಿಗದಿತ ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಆಡಳಿತದಲ್ಲಿ ನಿರ್ಲಕ್ಷ್ಯ ಹಾಗೂ ಅನಗತ್ಯ ವಿಳಂಬವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಶುಕ್ರವಾರ ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕೆಲವು ಜಿಲ್ಲೆಗಳು ಉತ್ತಮ ಕಾರ್ಯಕ್ಷಮತೆ ತೋರಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಇದಕ್ಕೆ ಕಾರಣಗಳನ್ನು ಪರಿಶೀಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಹಾಗೂ ನಿಗದಿತ ಕಾಲಮಿತಿಯಲ್ಲಿ ಗುರಿ ಸಾಧಿಸಲು ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಬರ ಪರಿಹಾರ ವಿತರಣೆ ವಿಳಂಬಕ್ಕೆ ಅಧಿಕಾರಿಗಳಿಗೆ ತರಾಟೆ
ಬರದಿಂದ ಸಂಕಷ್ಟಕ್ಕೀಡಾಗಿರುವ ಅರ್ಹ ಪ್ರತಿ ರೈತರಿಗೆ 5,000 ರೂಪಾಯಿ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ, ಪರಿಹಾರ ಘೋಷಿಸಿ ಎರಡು ತಿಂಗಳು ಕಳೆದರೂ ಕೆಲವು ಜಿಲ್ಲೆಗಳಲ್ಲಿ ರೈತರ ಖಾತೆಗಳಿಗೆ ಹಣ ಜಮೆಯಾಗದಿರುವುದು ಸರಿಯಲ್ಲ ಎಂದು ಡಿಸಿಎಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರದ ಘೋಷಣೆಗಳು ಕೇವಲ ಪ್ರಕಟಣೆಗಳಿಗೆ ಸೀಮಿತವಾಗಬಾರದು. ಪರಿಹಾರಕ್ಕಾಗಿ ಕಾಯುತ್ತಿರುವ ರೈತರಿಗೆ ಸರ್ಕಾರ ಏನು ಉತ್ತರ ನೀಡಬೇಕು ಮತ್ತು ಇಂತಹ ವಿಳಂಬದಿಂದ ಜನರಲ್ಲಿ ಸರ್ಕಾರದ ಬಗ್ಗೆ ಯಾವ ಅಭಿಪ್ರಾಯ ಮೂಡುತ್ತದೆ ಎಂಬುದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಅರ್ಹ ರೈತರಿಗೆ ಯಾವುದೇ ವಿಳಂಬವಿಲ್ಲದೆ ಪರಿಹಾರದ ಹಣ ತಲುಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕುಡಿಯುವ ನೀರು, ಮೇವಿನ ವ್ಯವಸ್ಥೆಗೆ ಆದ್ಯತೆ
ಸೂಪರ್ ಎಲ್ನೀನೋ ಪರಿಣಾಮದಿಂದ ರಾಜ್ಯದಲ್ಲಿ ಇಂತಹ ಭೀಕರ ಬರಗಾಲ ಎದುರಾಗಬಹುದು ಎಂಬುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಉತ್ತಮ ಬೆಳೆ ಬಂದಿರುವ ಬಗ್ಗೆ ವರದಿಗಳಿಲ್ಲ ಹಾಗೂ ಹಿಂಗಾರು ಮಳೆಯೂ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಕೃಷಿ ಉತ್ಪಾದನೆ ಕುಂಠಿತಗೊಂಡರೆ ಅದರ ಪರಿಣಾಮ ಇತರ ಕ್ಷೇತ್ರಗಳ ಮೇಲೂ ಬೀರುತ್ತದೆ. ಹೀಗಾಗಿ ಬರದ ಪರಿಣಾಮವನ್ನು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಹಾಗೂ ಜಾನುವಾರುಗಳಿಗೆ ಅಗತ್ಯ ಮೇವು ಲಭ್ಯವಾಗುವಂತೆ ಜಿಲ್ಲಾಧಿಕಾರಿಗಳು ವಿಶೇಷ ಗಮನಹರಿಸಬೇಕು. ರೈತರಿಗೆ ಮೇವಿನ ಬೀಜದ ಕಿಟ್ಗಳನ್ನು ವಿತರಿಸುವ ಕಾರ್ಯಕ್ರಮ ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಗತಿ ಕಾಣದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಮೇವಿನ ಬೀಜದ ಕಿಟ್ಗಳ ವಿತರಣೆಗಾಗಿ ಹೆಚ್ಚುವರಿಯಾಗಿ 30 ಕೋಟಿ ರೂಪಾಯಿ ಅನುದಾನ ಕೋರಿ ಸಲ್ಲಿಕೆಯಾಗಿರುವ ಪ್ರಸ್ತಾವನೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
15 ಲಕ್ಷ ನಿವೇಶನ ವಿತರಣೆಗೆ 24 ಸಾವಿರ ಎಕರೆ ಗುರುತು
ಬಡವರಿಗೆ ಶಾಶ್ವತ ಸೂರು ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರೂ ಬಡವರು ಇಂದಿಗೂ ಗುಡಿಸಲುಗಳಲ್ಲಿ ವಾಸಿಸುವ ಪರಿಸ್ಥಿತಿ ಇರುವುದು ಕಳವಳಕಾರಿ ಎಂದು ಪರಮೇಶ್ವರ ಹೇಳಿದರು. ಮುಖ್ಯಮಂತ್ರಿಗಳ ಆಶಯದಂತೆ ಬಡವರಿಗೆ 15 ಲಕ್ಷ ನಿವೇಶನಗಳನ್ನು ಒದಗಿಸುವ ಯೋಜನೆಯನ್ನು ಪ್ರಮುಖ ಕಾರ್ಯಕ್ರಮವಾಗಿ ಪರಿಗಣಿಸಿ ಅನುಷ್ಠಾನಗೊಳಿಸಬೇಕು. ಇದಕ್ಕಾಗಿ ಈಗಾಗಲೇ ಸುಮಾರು 24 ಸಾವಿರ ಎಕರೆ ಜಮೀನನ್ನು ಗುರುತಿಸಲಾಗಿದ್ದು, ಅರ್ಹ ಫಲಾನುಭವಿಗಳ ಆಯ್ಕೆ, ಜಮೀನು ಪ್ರಕ್ರಿಯೆ ಮತ್ತು ನಿವೇಶನ ವಿತರಣೆಯಲ್ಲಿ ಯಾವುದೇ ವಿಳಂಬವಾಗಬಾರದು ಎಂದು ನಿರ್ದೇಶನ ನೀಡಿದರು.
ಪಿಂಚಣಿ ಫಲಾನುಭವಿಗಳ ಸಮಗ್ರ ಪರಿಶೀಲನೆಗೆ ಸೂಚನೆ
ರಾಜ್ಯದಲ್ಲಿ ಪಿಂಚಣಿ ಸೌಲಭ್ಯಕ್ಕೆ ಒಳಪಡದ ಸುಮಾರು 23 ಲಕ್ಷ ಜನರನ್ನು ಗುರುತಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ಆರಂಭಿಕ ಹಂತದಲ್ಲೇ ಹೆಚ್ಚಿನ ಎಚ್ಚರಿಕೆ ವಹಿಸಬೇಕಿತ್ತು. ಅರ್ಹರು ಸೌಲಭ್ಯದಿಂದ ವಂಚಿತರಾಗದಂತೆ ಹಾಗೂ ಅನರ್ಹರಿಗೆ ಸೌಲಭ್ಯ ದೊರೆಯದಂತೆ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು. ಅಧಿಕಾರಿಗಳು ಕೇವಲ ಪ್ರಗತಿ ವರದಿಗಳನ್ನು ಸಲ್ಲಿಸುವುದಕ್ಕೆ ಸೀಮಿತವಾಗದೆ, ಜನರಿಗೆ ಯೋಜನೆಗಳ ನೈಜ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಪಾರದರ್ಶಕತೆ, ವೇಗ ಮತ್ತು ಹೊಣೆಗಾರಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೃಷಿ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್ಚಂದ್ರ, ಕಂದಾಯ ಆಯುಕ್ತರಾದ ಮೀನಾ ನಾಗರಾಜ್, ಭೂಮಾಪನ ಮತ್ತು ಭೂದಾಖಲೆಗಳ ಆಯುಕ್ತ ರಾಕೇಶ್ ಕುಮಾರ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಆಯುಕ್ತೆ ಹೊನ್ನಾಂಬ ಹಾಗೂ ಯುವಜನಸೇವಾ ಮತ್ತು ಕ್ರೀಡಾ ಆಯುಕ್ತ ಎಂ.ಎನ್. ಅನುಚೇತ್ ಉಪಸ್ಥಿತರಿದ್ದರು.


















