ಬೆಂಗಳೂರು: ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳು ಉದ್ಯೋಗ ಮತ್ತು ಪ್ರೋತ್ಸಾಹ ಅರಸಿ ಅನ್ಯ ರಾಜ್ಯಗಳಿಗೆ ವಲಸೆ ಹೋಗುವುದನ್ನು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಕ್ರೀಡಾಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡುತ್ತಿದೆ ಎಂದು ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜ್ ತಿಳಿಸಿದ್ದಾರೆ. ಕ್ರೀಡಾಪಟುಗಳ ಭವಿಷ್ಯಕ್ಕೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಉದ್ಯೋಗ ಖಾತ್ರಿಯನ್ನು ನೀಡಿದೆ ಎಂದು ಅವರು ಹೇಳಿದರು.
ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಸರ್ಕಾರಿ ಉದ್ಯೋಗಗಳಲ್ಲಿ ಶೇಕಡ 2 ರಷ್ಟು ಮೀಸಲಾತಿ ನೀಡಲಾಗಿದ್ದು, ವಿಶೇಷವಾಗಿ ಅರಣ್ಯ ಮತ್ತು ಪೊಲೀಸ್ ಇಲಾಖೆಗಳಲ್ಲಿ ಶೇಕಡ 3 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಈಗಾಗಲೇ ರಾಜ್ಯದ 12 ಸಾಧಕ ಕ್ರೀಡಾಪಟುಗಳಿಗೆ ನೇರವಾಗಿ ಗ್ರೂಪ್ ಬಿ ಹುದ್ದೆಗಳನ್ನು ನೀಡಲಾಗಿದೆ ಎಂದರು.
ಹಾಜರಾತಿ ವಿನಾಯಿತಿ ಮತ್ತು ಗ್ರೇಸ್ ಅಂಕ ಶೀಘ್ರ ಜಾರಿ
ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಶೈಕ್ಷಣಿಕವಾಗಿ ತೊಂದರೆಯಾಗದಂತೆ ನೋಡಿಕೊಳ್ಳಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಡಾ. ಕೆ. ಗೋವಿಂದರಾಜ್ ವಿವರಿಸಿದರು. ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶೇಕಡ 25 ರಷ್ಟು ಹಾಜರಾತಿ ವಿನಾಯಿತಿ ಹಾಗೂ ಪರೀಕ್ಷೆಯಲ್ಲಿ ಐದು ಗ್ರೇಸ್ ಅಂಕಗಳನ್ನು ನೀಡಲು ತೀರ್ಮಾನಿಸಲಾಗಿದೆ. ಈ ನಿಯಮವು ಶೀಘ್ರದಲ್ಲೇ ಅಧಿಕೃತವಾಗಿ ಕಾರ್ಯರೂಪಕ್ಕೆ ಬರಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಗ್ರಾಮೀಣ ಹೆಣ್ಣುಮಕ್ಕಳ ಭಾಗವಹಿಸುವಿಕೆಗೆ ಮೆಚ್ಚುಗೆ
ಯುವ ಕ್ರೀಡಾಪಟುಗಳೇ ದೇಶದ ಭವಿಷ್ಯ ಎಂಬ ಆಶಯದೊಂದಿಗೆ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಆರಂಭಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ 14 ವರ್ಷ ವಯೋಮಿತಿಯ ವಿಭಾಗದ ಕ್ರೀಡಾಕೂಟವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಣ್ಣುಮಕ್ಕಳನ್ನು ಕ್ರೀಡೆಗಾಗಿ ಮನೆಯಿಂದ ಹೊರಗೆ ಕಳುಹಿಸುವುದೇ ಸವಾಲಿನ ಸಂಗತಿಯಾಗಿರುವ ಪರಿಸ್ಥಿತಿಯಲ್ಲೂ, ಈ ಬಾರಿ ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.
ಕ್ರೀಡೆಯ ಜೊತೆಗೆ ಶಿಕ್ಷಣಕ್ಕೂ ಆದ್ಯತೆ ನೀಡಿ
ರಾಜ್ಯದ ಮೂಲೆಮೂಲೆಗಳಿಂದ ಮಕ್ಕಳು ಈ ಕ್ರೀಡಾಕೂಟಕ್ಕೆ ಆಗಮಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಮಕ್ಕಳನ್ನು ಕ್ರೀಡಾಕೂಟಕ್ಕೆ ಕಳುಹಿಸಿ ಸಂಪೂರ್ಣ ಸಹಕಾರ ನೀಡಿದ ಪೋಷಕರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದ ಗೋವಿಂದರಾಜ್, ಮಕ್ಕಳು ಕ್ರೀಡೆಯ ಜೊತೆಗೆ ಓದಿನ ಕಡೆಗೂ ಸಮಾನ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.



















