ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮ ಪಂಚಾಯಿತಿಗೆ ಕುಡಿಯುವ ನೀರಿನ ಸಮಸ್ಯೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದೂರದ ಕೃಷಿ ಪಂಪ್ಸೆಟ್ಗಳಿಂದ ನೀರು ತಂದು ಬಳಸುವಂತಾಗಿದೆ.
ಕಳೆದ ಒಂದು ವಾರದಿಂದ ಪಂಚಾಯಿತಿಯಿಂದ ನೀರು ಪೂರೈಕೆಯಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಮೋಟಾರ್ ಕೆಟ್ಟಿದೆ ಎಂಬ ಸಬೂಬು ಹೇಳುತ್ತಿರುವ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೂಡಲೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಸಮರ್ಪಕ ನೀರು ಪೂರೈಕೆ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.


















