ಪುಣೆ: ಪ್ರಕರಣವೊಂದರ ವಿಚಾರಣೆಗೆ ಹಾಜರಾಗಲು ಬಂದಿದ್ದ ಕೊಲೆ ಆರೋಪಿಯ ಮೇಲೆ ಪುಣೆಯ ಶಿವಾಜಿನಗರ ಜಿಲ್ಲಾ ನ್ಯಾಯಾಲಯದ ಆವರಣದ ಬಳಿಯೇ ದುಷ್ಕರ್ಮಿಗಳ ಗುಂಪೊಂದು ಹಾಡಹಗಲೇ ಮಾರಣಾಂತಿಕ ಹಲ್ಲೆ ನಡೆಸಿದೆ. ಬುಧವಾರ ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ನ್ಯಾಯಾಲಯದ ಗೇಟ್ ನಂಬರ್ 4ರ ಬಳಿಯ ಕುಟುಂಬ ನ್ಯಾಯಾಲಯದ ಎದುರು ಈ ಘಟನೆ ಸಂಭವಿಸಿದ್ದು, ದಾಳಿಯಲ್ಲಿ ಆರೋಪಿಯ ಒಂದು ಕೈ ಮಣಿಕಟ್ಟಿನ ಬಳಿ ತುಂಡಾಗಿದೆ.
ದಾಳಿಗೊಳಗಾದ ವ್ಯಕ್ತಿಯನ್ನು ಮಂದಾರ್ ಮಾರುತಿ ಕಿವ್ಲೆ (35) ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಬಂದ ಸುಮಾರು ನಾಲ್ಕರಿಂದ ಆರು ಮಂದಿಯ ತಂಡ, ನ್ಯಾಯಾಲಯದ ಪ್ರವೇಶ ದ್ವಾರದ ಬಳಿ ಮಂದಾರ್‌ನನ್ನು ಅಟ್ಟಾಡಿಸಿಕೊಂಡು ಹೋಗಿ ಕುಡುಗೋಲು ಸೇರಿದಂತೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದೆ. ತೀವ್ರ ರಕ್ತಸ್ರಾವದಿಂದ ಗಾಯಗೊಂಡಿರುವ ಮಂದಾರ್‌ನನ್ನು ತಕ್ಷಣವೇ ಪುಣೆಯ ಸಾಸ್ಸೋನ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಹಲ್ಲೆ ನಡೆಸಿದ ದೃಶ್ಯಗಳು ಸ್ಥಳೀಯರ ಮೊಬೈಲ್ ಹಾಗೂ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಸ್ಥಳದಲ್ಲಿ ಪಿಸ್ತೂಲ್ ಮತ್ತು ಮದ್ದುಗುಂಡುಗಳು ಪತ್ತೆ
ದಾಳಿಯ ಬಳಿಕ ದುಷ್ಕರ್ಮಿಗಳು ತಮ್ಮ ವಾಹನಗಳಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪುಣೆ ನಗರ ಪೊಲೀಸರು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಎರಡು ಪಿಸ್ತೂಲ್‌ಗಳು, ಮ್ಯಾಗಜೀನ್ ಹಾಗೂ ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಳಿಕೋರರು ಗುಂಡು ಹಾರಿಸಲು ಯತ್ನಿಸಿದ್ದಾರೆಯೇ ಅಥವಾ ಗುಂಡಿನ ದಾಳಿ ನಡೆದಿದೆಯೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಗಾಯಾಳುವಿನ ದೇಹದ ಮೇಲೆ ಗುಂಡೇಟಿನ ಗಾಯಗಳು ಕಂಡುಬಂದಿಲ್ಲ ಎಂದು ಕ್ರೈಂ ಬ್ರಾಂಚ್ ಅಧಿಕಾರಿಗಳು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.
ಹಳೆಯ ದ್ವೇಷ ಮತ್ತು ಪ್ರತೀಕಾರದ ಶಂಕೆ
2025ರ ಏಪ್ರಿಲ್ ತಿಂಗಳಲ್ಲಿ ಪುಣೆಯ ಸಂತೋಷ್‌ನಗರ-ಕಟ್ರಾಜ್ ಪ್ರದೇಶದಲ್ಲಿ ಆರ್ಥಿಕ ವಹಿವಾಟು ಮತ್ತು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಶುಭಮ್ ಸುಭಾಷ್ ಚವಾನ್ ಎಂಬುವವರ ಕೊಲೆ ನಡೆದಿತ್ತು. ಈ ಕೊಲೆ ಪ್ರಕರಣದಲ್ಲಿ ಮಂದಾರ್ ಕಿವ್ಲೆ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದು, ಜೈಲು ಶಿಕ್ಷೆ ಅನುಭವಿಸುತ್ತಿದ್ದ. ನಾಲ್ಕು ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಆತ, ಬುಧವಾರ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಆಗಮಿಸಿದ್ದ ವೇಳೆ ಈ ದಾಳಿ ನಡೆದಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಪ್ರತೀಕಾರ ತೀರಿಸಿಕೊಳ್ಳಲು ಈ ಹಲ್ಲೆ ನಡೆಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಆರೋಪಿಗಳ ಪತ್ತೆಗೆ ಪೊಲೀಸ್ ತಂಡಗಳ ರಚನೆ
ನ್ಯಾಯಾಲಯದ ಆವರಣದಲ್ಲೇ ನಡೆದ ಈ ಘಟನೆಯಿಂದ ವಕೀಲರು ಮತ್ತು ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭದ್ರತೆಯನ್ನು ಪರಿಶೀಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ದಾಳಿಕೋರರ ಗುರುತು ಪತ್ತೆಹಚ್ಚುವ ಕಾರ್ಯ ನಡೆದಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ.


















