ನವದೆಹಲಿ: ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ದೆಹಲಿಯ ಗ್ರೇಟರ್ ನೋಯ್ಡಾದಲ್ಲಿ ಈ ಘಟನೆ ನಡೆದಿದೆ. ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರ ಹಾಗೂ ಇಬ್ಬರು ಸಹೋದರಿಯರು ಸಾವನ್ನಪ್ಪಿದ್ದಾರೆ.ಇವರೆಲ್ಲ ತಡರಾತ್ರಿ ಮದುವೆ ಮನೆಗೆ ತೆರಳಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸುರೇಂದ್ರ ಹಾಗೂ ಸಹೋದರಿಯರಾದ ಶೈಲಿ ಮತ್ತು ಅಂಶು ಸಾವನ್ನಪ್ಪಿದ್ದಾರೆ. ಅಪಘಾತವಾಗುತ್ತಿದ್ದಂತೆ ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನೋಯ್ಡಾದ ಕುಲೇಸರ ಎಂಬ ತಮ್ಮ ನಿವಾಸಕ್ಕೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ, ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.