ದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal)ಗೆ ಜೂ. 1ರ ವರೆಗೆ ಮಧ್ಯಂತರ ಜಾಮೀನು ನೀಡಲಾಗಿದ್ದು, ಜೂ. 2ಕ್ಕೆ ಮತ್ತೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಲೋಕಸಭೆ ಚುನಾವಣೆಯ ನಡುವೆ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸದ್ಯ ಮತ್ತೆ ರಿಲೀಫ್ ಸಿಕ್ಕಂತಾಗಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠ ಈ ತೀರ್ಪು ಪ್ರಕಟಿಸಿದೆ. ದೆಹಲಿಯಲ್ಲಿ ಮೇ 25 ರಂದು ಆರನೇ ಹಂತದ ಮತದಾನ ನಡೆಯಲಿದೆ. ಇದರ ಮಧ್ಯೆಯೇ ಅವರಿಗೆ ಜಾಮೀನು ಸಿಕ್ಕಿದೆ.
ಜೈಲಿನಿಂದ ಹೊರಬಂದ ನಂತರ ಕೇಜ್ರಿವಾಲ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬಹುದು ಮತ್ತು ಪತ್ರಿಕಾಗೋಷ್ಠಿ ನಡೆಸಬಹುದು. ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು, ಏಪ್ರಿಲ್ 1 ರಿಂದ ಇಲ್ಲಿಯವರೆಗೆ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.