ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಸಿಬ್ಬಂದಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕೆಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ನಾಗೇಂದ್ರ ಕೂಡಲೇ ರಾಜೀನಾಮೆ ನೀಡಿ, ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಂದ ಇದರ ಸಮಗ್ರ ನಿಷ್ಪಕ್ಷಪಾತ ತನಿಖೆ ಮಾಡಲು ಅಸಾಧ್ಯ. ಆದ್ದರಿಂದ ಕೇಂದ್ರ ಸರ್ಕಾರದ ಏಜೆನ್ಸಿಗಳ ಮೂಲಕ ತನಿಖೆ ನಡೆಸಬೇಕು ಎಂದು ಕೂಡ ಈ ಸಂದರ್ಭದಲ್ಲಿ ಮನವಿ ಮಾಡಿದರು.
ಆತ್ಮಹತ್ಯೆ ಮಾಡಿಕೊಂಡಿರುವ ಚಂದ್ರಶೇಖರ್ ಅವರ ಮೌಖಿಕ ಆದೇಶದಂತೆ ಹಣ ವರ್ಗಾವಣೆ ಮಾಡಿದ್ದಾಗಿ ಬರೆದುಕೊಂಡಿದ್ದಾರೆ. ಆದರೂ ಸಚಿವರ ಹೆಸರು ಏಕೆ ಇಲ್ಲ ಎಂದು ಪ್ರಶ್ನಿಸಿದ್ದಾರೆ.
ಜಂಟಿ ಖಾತೆ ಇದ್ದಾಗ ಹೇಗೆ ವರ್ಗಾವಣೆ ಆಗಿದೆ? ಬ್ಯಾಂಕಿನ ಪ್ರತಿ ತಿಂಗಳ ವಿವರ- ಹುಜೂರ್ ಖಜಾನೆಯ ವಿವರವನ್ನು ಪುನರ್ ಪರಿಶೀಲಿಸಲಿಲ್ಲವೇ? ಎಂದು ಕೂಡ ಪ್ರಸ್ನಿಸಿದ್ದಾರೆ. ಬಹುಶಃ ಇತ್ತೀಚಿನ ವರ್ಷಗಳಲ್ಲಿ ಸರ್ಕಾರದ ಖಜಾನೆಯನ್ನೇ ಲೂಟಿ ಮಾಡಿದ ದೊಡ್ಡ ಹಗರಣವಿದು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವುದು ಹಗಲುದರೋಡೆ. 187 ಕೋಟಿ ರೂ. ಹಗರಣದ ವಿಚಾರ ಗೊತ್ತಿದ್ದೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತ ಸರ್ಕಾರವಿದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.