ಶಿವಮೊಗ್ಗ: ವಾಲ್ಮೀಕಿ ನಿಗಮದಲ್ಲಿ (Valmiki Corporation Scam ) ಆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಎಂ (CM Siddaramaiah) ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿ ಹೋರಾಟ ನಡೆಸಿದ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಆದರೆ ಎಸ್‍ಐಟಿ ಇಲ್ಲಿನವರೆಗೆ ನಾಗೇಂದ್ರರನ್ನು ವಿಚಾರಣೆಗೆ ಒಳಪಡಿಸಿಲ್ಲ. ನಮ್ಮ ಹೋರಾಟದ ಮುಂದುವರೆದ ಭಾಗವಾಗಿ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ದದ್ದಲ್, ಸಿಎಂ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
