ಉತ್ತರ ಪ್ರದೇಶದ (Uttar Pradesh) ಹತ್ರಾಸ್ ನಲ್ಲಿ (Hathras stampede) ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.
ಹತ್ರಾಸ್ ಜಿಲ್ಲೆಯ ಸಿಕಂದರಾ ರಾವು ತಹಸಿಲ್‌ನ ರತಿಭಾನ್‌ಪುರ ಗ್ರಾಮದಲ್ಲಿ ಧಾರ್ಮಿಕ ಬೋಧಕ ನೆರವೇರಿಸುತ್ತಿದ್ದ ಸತ್ಸಂಗದ ಕಾರ್ಯಕ್ರಮದಲ್ಲಿ ಈ ಕಾಲ್ತುಳಿತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯು 107ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ಹಲವರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಈ ಘಟನೆಗೆ ಇಡೀ ದೇಶವೇ ಮಮ್ಮಲ ಮರುಗಿದೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೂಡ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನಾ ನಿರ್ಣಯದ ಚರ್ಚೆಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಹಾಥರಸ್ನಲ್ಲಿ ಕಾಲ್ತುಳಿತದಲ್ಲಿ ಅನೇಕ ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಉತ್ತರ ಪ್ರದೇಶ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡಲಾಗುವುದು ಎಂದು ನಾನು ಈ ಸದನದ ಮೂಲಕ ಎಲ್ಲರಿಗೂ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಅಲ್ಲದೇ, ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವನ್ನು ಗಾಯಗೊಂಡವರಿಗೆ ನೀಡುವಂತೆ ಸೂಚನೆ ನೀಡಿದ್ದಾರೆ.
ಅಲ್ಲದೇ, ಘಟನೆ ಕುರಿತು ಎಫ್ ಐಆರ್ ದಾಖಲಿಸಲಾಗುವುದು ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಜೊತೆಗೆ ಮೃತರ ಕುಟುಂಬಗಳಿಗೆ ಯೋಗಿ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.