ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ನಗರದ ಪ್ರೀಡಂ ಪಾರ್ಕ್ ನಲ್ಲಿ ಗುರುವಾರ ಪ್ರತಿಭಟನೆ ನಡೆಸಿದ್ದಾರೆ.
ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಲಾಯಿತು. ಸದನದಲ್ಲಿ ಕೂಡ ಬಿಜೆಪಿ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಧೇಯಕಕ್ಕೆ ತಡೆ ನೀಡಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರ ಬೆನ್ನಲ್ಲಿಯೇ ಪ್ರತಿಭಟನೆ ನಡೆದಿದೆ.
ಇನ್ನೊಂದೆಡೆ ಸಚಿವರಾದ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿಗೆ ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ, ವಾಲ್ಮೀಕಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಅಧಿಕಾರಿಗಳ ಮೇಲೆ ಒತ್ತಡ ಹಾಕಲಾಗುತ್ತಿದೆ. ಸಿಎಂ, ಡಿಸಿಎಂ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಲಾಪದಲ್ಲಿ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್, ದಲಿತ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಳ್ಳದಿದ್ದರೆ ಈ ಪ್ರಕರಣ ಬಯಲಾಗ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.