ವಿಜಯನಗರ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಬರೋಬ್ಬರಿ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಲಿಯಾಸ್ ಬಂಧಿತ ಆರೋಪಿ. ಈತ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸುವ ಮೂಲಕ ಆರೋಪಿಯ ಬಂಧಿಸುವಲ್ಲಿ ಯಶ ಕಂಡಿದ್ದಾರೆ.
ಈತನನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾಗ ಪರಾರಿಯಾಗಿದ್ದ. ಆನಂತರ ಕಳೆದ 14 ವರ್ಷಗಳಿಂದ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೆಬ್ಬೂರು ಗ್ರಾಮದಲ್ಲಿ ವಾಸಿಸುತ್ತಿದ್ದ. ಅಲ್ಲಿಯೇ ಮದುವೆ ಮಾಡಿಕೊಂಡು ಹೆಂಡತಿ, ಮಕ್ಕಳೊಂದಿಗೆ ವಾಸಿಸುತ್ತಿದ್ದ.
ಆರೋಪಿ ಪತ್ತೆಗಾಗಿ ವಿಜಯನಗರ ಎಸ್ಪಿ ಶ್ರೀಹರಿಬಾಬು ಎರಡು ಪ್ರತ್ಯೇಕ ತಂಡಗಳನ್ನ ರಚಿಸಿದ್ದರು. ವೈಜ್ಞಾನಿಕ ತಂತ್ರಜ್ಞಾನಗಳನ್ನ ಬಳಸಿ ಸತತ ಕಾರ್ಯಾಚರಣೆಯ ಮೂಲಕ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.