ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ ಇದ್ದು, ಜನರು ಹೈರಾಣಾಗಿ ಹೋಗಿದ್ದಾರೆ. ಹಲವೆಡೆಯಂತೂ ಜನ- ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಸಾಕಷ್ಟು ಅವಾಂತರಗಳನ್ನು ಜನರು ಎದುರಿಸುವಂತಾಗಿದೆ.
ಸರ್ಕಾರ, ಅಧಿಕಾರಿಗಳಿದ್ದರೂ ನೆರವಿಗೆ ಧಾವಿಸುತ್ತಿಲ್ಲ. ಹೀಗಾಗಿ ಜನರೇ ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಬಂದಿದೆ. ಕರಾವಳಿ, ಮಲೆನಾಡು ಪ್ರದೇಶಗಳಲ್ಲಿನ ಜನರು ಕೈಯಲ್ಲಿ ಜೀವ ಹಿಡಿದು ಬದುಕು ಸಾಗಿಸುವಂತಾಗುತ್ತಿದೆ. ಹೀಗಾಗಿ ಹಲವೆಡೆ ಶಾಲಾ-ಕಾಲೇಜುಗಳಿಗೆ ಕೂಡ ರಜೆ ಘೋಷಿಸಲಾಗಿದೆ. ಇಂದು ಕೂಡ ಮಳೆಯ ಆರ್ಭಟ ಇರುವ ಹಿನ್ನೆಲೆಯಲ್ಲಿ ಹಲವೆಡೆ ಹೈ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನ ಕೆಲವೆಡೆ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಜುಲೈ 26ರಿಂದ ಮೂರು ದಿನ ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜುಲೈ 26 ಮತ್ತು 27ರಂದು ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಇದೇ ದಿನಗಳಂದು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ನರಸಿಂಹರಾಜಪುರ, ಕೊಪ್ಪ, ಶೃಂಗೇರಿ, ಮೂಡಿಗೆರೆ ಮತ್ತು ಕಳಸ ತಾಲೂಕಿನಲ್ಲಿನ ಶಾಲಾ-ಕಾಲೇಜುಗಳಇಗೆ ಜು. 26ರಂದು ರಜೆ ಘೋಷಿಸಲಾಗಿದೆ.
ಹಾವೇರಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆ ಹಿತದೃಷ್ಟಿಯಿಂದ ಜು.26 ಹಾಗೂ 27 ರಂದು ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಉಳಿದಂತೆ ಧಾರವಾಡ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯ ಹಿನ್ನಲೆಯಲ್ಲಿ ಜು.26ರಂದು ರಜೆ ಘೋಷಿಸಲಾಗಿದೆ