ಸಂಸತ್ ವಿರೋಧ ಪಕ್ಷದ ನಾಯಕ ಹಾಗೂ ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ ಇಂದು ಕೇರಳದ ವಯನಾಡು ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ತೆರಳಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ಕೇರಳದ ಪ್ರವಾಹಪೀಡಿತ ಪ್ರದೇಶವಾದ ಮೆಪ್ಪಾಡಿಗೆ ಹೋಗಲಿದ್ದಾರೆ. ಅಲ್ಲಿ ವಯನಾಡು, ಮೆಪ್ಪಾಡಿಯಲ್ಲಿನ ವಿವಿಧ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ವಿಮ್ಸ್ ಆಸ್ಪತ್ರೆಗೆ ಕೂಡ ರಾಹುಲ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ.
ಭೂಕುಸಿತದ ಕುರಿತು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ವಯನಾಡ್ ಜಿಲ್ಲಾಧಿಕಾರಿ ಅವರೊಂದಿಗೆ ರಾಹುಲ್ ಗಾಂಧಿ ಮಂಗಳವಾರ ದೂರವಾಣಿ ಮೂಲಕ ಮಾತುಕತೆ ನಡೆಸಿ, ಪರಿಸ್ಥಿತಿ ಬಗ್ಗೆ ಅವಲೋಕಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲ ತುರ್ತು ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.
ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಹೊರಡುತ್ತವೆ. ಇನ್ನೂ ಸಿಕ್ಕಿಬಿದ್ದಿರುವವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಕರೆತರಲಾಗುವುದು. ನಾನು ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆಗೆ ಬೇಕಾದ ಸೌಲಭ್ಯ ಒದಗಿಸುವುದಾಗಿ ಸೂಚಿಸಿದ್ದೇನೆ” ಎಂದು ಸಂತಾಪ ಸೂಚಿಸಿದ್ದಾರೆ.
ಪ್ರಿಯಾಂಕಾ ಗಾಂಧಿ, ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರಿಗೂ ನನ್ನ ಸಂತಾಪಗಳು. ಎಲ್ಲರನ್ನೂ ಆದಷ್ಟು ಬೇಗ ಸುರಕ್ಷಿತವಾಗಿ ಕರೆತರಲೆಂದು ನಾನು ಭಾವಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ. ವಯನಾಡು ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ಕೂಡ ರಾಹುಲ್ ಗಾಂಧಿಯ ಜೊತೆಗೆ ವಯನಾಡಿಗೆ ಭೇಟಿ ನೀಡಲಿದ್ದಾರೆ.