ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಹಲವೆಡೆಯಂತೂ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಹೀಗಾಗಿ ಆಗಸ್ಟ್ 1ರಂದು ಕೂಡ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಹೀಗಾಗಿ ನದಿ-ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಜನವಸತಿ ಪ್ರದೇಶಕ್ಕೂ ಪ್ರವಾಹದ ನೀರು ಹರಿದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆಯೂ ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ (holiday) ನೀಡಲಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಅಂಗನವಾಡಿಯಿಂದ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಆದರೆ, ಕೊಡಗು ಜಿಲ್ಲೆಯಲ್ಲಿ ಯಾವುದೇ ರಜೆ ಘೋಷಿಸಿಲ್ಲ. ಆದರೆ, ಡಿಸಿ ನಕಲಿ ಆದೇಶ ಪ್ರತಿಯನ್ನು ಎಡಿಟ್ ಮಾಡಿ ಕಿಡಿಗೇಡಿಗಳಿಂದ ವೈರಲ್ ಮಾಡುತ್ತಿದೆ. ಹೀಗಾಗಿ ಪೋಷಕರು ಹಾಗೂ ಶಿಕ್ಷಕರು ಗೊಂದಲದಲ್ಲಿದ್ದಾರೆ.