ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಜನ- ಜೀವನವಂತೂ ಅಕ್ಷರಶಃ ಹಾನಿಯಾಗಿದೆ. ಇನ್ನೂ ಎರಡು ದಿನ ಮಳೆಯ ಮುನ್ಸೂಚನೆ ಇದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಗುಜರಾತ್ ಮೂಲಕ ಕೇರಳದ ಕರಾವಳಿವರೆಗೆ ತೇವಾಂಶ ಭರಿತ ಮೋಡಗಳು ಹಾದು ಹೋಗಿದ್ದು, ಕರ್ನಾಟಕದ ಕರಾವಳಿ ಹಾಗೂ ಪಶ್ಚಿಮಘಟ್ಟ ಭಾಗಗಳಲ್ಲಿಗಾಳಿ ಬೀಸುತ್ತಿರುವ ಪರಿಣಾಮ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ ಎರಡು ದಿನ ವ್ಯಾಪಕ ಹಾಗೂ ಬಿರುಸಿನಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಆ.6 ರಿಂದ ಆ.7 ರವರೆಗೆ ಈ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ಇದೆ. ಇನ್ನುಳಿದಂತೆ ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಆ. 4 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ.
ಅಲ್ಲದೇ, ಮಳೆಯಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿರುವ ಪಕ್ಕದ ಕೇರಳದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕೇರಳದ ಕಾಸರಗೋಡು, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಮತ್ತಷ್ಟು ತೊಂದರೆಯ ಆತಂಕ ಕೇರಳವನ್ನು ಆವರಿಸಿದೆ.