ಕೊಲೆ ಆರೋಪಿ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈಗ ಕಾರಾಗೃಹ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ನೋಟಿಸ್ ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಗೆ ತಲೆನೋವು ಶುರುವಾಗಿದೆ. ದರ್ಶನ್ ತಮ್ಮ ಪ್ರಭಾವ ಬಳಸಿ ವಿಐಪಿ ಟ್ರೀಟ್ ಮೆಂಟ್ ಪಡೆದುಕೊಂಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಸರ್ಕಾರ ತನಿಖೆಗೆ ಸೂಚಿಸಿದ್ದು, ಮೂರು ಎಫ್ ಐಆರ್ ದಾಖಲಾಗಿವೆ. ಈ ಮಧ್ಯೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ನೋಟಿಸ್ ನೀಡಲಾಗಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಈ ನೋಟಿಸ್ ಜಾರಿ ಮಾಡಲಾಗಿದೆ. ಜೈಲಿನಲ್ಲಿ ನಡೆದ ಅಕ್ರಮದ ಬಗ್ಗೆ ವಿವರಣೆ ನೀಡುವಂತೆ ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ. ಅಲ್ಲದೇ, ಈ ಘಟನೆಯಲ್ಲಿ ಕೃಷ್ಣಮೂರ್ತಿ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಆದರೆ, ಹಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ಸೂಚಿಸಲಾಗಿದೆ.
ಜೈಲಿನ ಅಕ್ರಮ ತಡೆಗಟ್ಟುವ ವಿಚಾರದಲ್ಲಿ ನೀವು ಕೈಗೊಂಡ ಕ್ರಮಗಳೇನು? ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳು ಗಮನಕ್ಕೆ ಬಂದಿರಲಿಲ್ವಾ? ನೀವು ಕೂಡ ಅಕ್ರಮದಲ್ಲಿ ಭಾಗಿಯಾಗಿದ್ದೀರಿ ಎಂದು ಏಕೆ ಭಾವಿಸಬಾರದು? ಸೇರಿದಂತೆ ಹಲವಾರು ಪ್ರಶ್ನೆಗಳಿಗೆ ಉತ್ತರಿಸುವಂತೆ ನೋಟಿಸ್ ನೀಡಲಾಗಿದೆ. ಸದ್ಯ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ.