ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ‘ರಾಜಭವನ ಚಲೋ’ ನಡೆಸಿದ್ದಾರೆ.
ಈ ವೇಳೆ ಹಿಂದಿನ ಪ್ರಕರಣಗಳ ವಿರುದ್ಧವೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಆರೋಪ ಕೇಳಿ ಬರುತ್ತಿದ್ದಂತೆ ಹಿಂದೆ ಮುಂದೆ ನೋಡದೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಆದರೆ, ಇದಕ್ಕೂ ಮುನ್ನವೇ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ, ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ ಮಾಡಲಾಗಿತ್ತು. ಅವುಗಳಿಗೂ ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ.
ಈ ವೇಳೆ ರಾಜ್ಯಪಾಲರು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನೇರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿಲ್ಲ. ಕೇವಲ ತನಿಖೆಗೆ ಸೂಚಿಸಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ನಿರಾಣಿ, ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ವೇಳೆ ರಾಜ್ಯಪಾಲರು ನ್ಯಾಯ ದೊರಕಿಸುವ ಭರವಸೆ ನೀಡಿದ್ದಾರೆ ರಾಜ್ಯಪಾಲರ ಪೀಠ ಪವಿತ್ರವಾದದ್ದು. ಅದು ಸಂವಿಧಾನ ರಕ್ಷಿಸುವ ಪೀಠ. ರಾಜ್ಯಪಾಲರ ಕಚೇರಿ ಸರ್ಕಾರವನ್ನು ರಕ್ಷಿಸುವ ಪೀಠವಾಗಿದೆ. ರಾಜ್ಯಪಾಲರ ಕಚೇರಿ ಯಾವುದೋ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು ಎಂದು ಹೇಳಿದ್ದಾರೆ.
ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದೇವೆ. ಎಲ್ಲ ವಿಚಾರಗಳಲ್ಲಿಯೂ ಪಕ್ಷಾತೀತವಾಗಿ ನಡೆದುಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.


















