ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ ಎದುರಾಗಿದೆ. ಹೇಗಾದರೂ ಮಾಡಿ ಈ ಪ್ರಕರಣದಲ್ಲಿ ಅವರನ್ನು ಸಿಕ್ಕಿಸಬೇಕೆಂದು ವಿಪಕ್ಷಗಳು ಯತ್ನಿಸುತ್ತಿದ್ದಾರೆ. ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಹೀಗಾಗಿ ಈಗ ಎಲ್ಲರ ಚಿತ್ತ ಕೋರ್ಟ್ ನತ್ತ ಎನ್ನುವಂತಾಗಿದೆ.
ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ.
ಈ ಅರ್ಜಿಯ ವಿಚಾರಣೆ ಸೆ. 2ರಂದು ನಡೆದಿತ್ತು. ಆಗ ಕೋರ್ಟ್ ಮಧ್ಯಂತರ ಆದೇಶ ವಿಸ್ತರಿಸಿ, ಅರ್ಜಿಯ ವಿಚಾರಣೆಯನ್ನು ಸೆ. 9ರಂದು ಮಧ್ಯಾಹ್ನ 2.30ಕ್ಕೆ ಮುಂದೂಡಿತ್ತು.
ಕರ್ನಾಟಕ ಸರ್ಕಾರದ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಹಬ್ಬದ ರಜೆ ಇರುವ ಕಾರಣ ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಬೇಕು ಎಂದು ಅವರು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಆದ್ದರಿಂದ ಸೆಪ್ಟೆಂಬರ್ 2ರಂದು ವಿಚಾರಣೆ ಮುಂದೂಡಿಕೆ ಮಾಡಲಾಗಿತ್ತು.
ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ. ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡನೆ ಪೂರ್ಣಗೊಳಿಸಿದ್ದಾರೆ. ದೂರದಾರ ಟಿ. ಜೆ. ಅಬ್ರಾಹಂ ಕಡೆಯ ವಾದ ಕೂಡ ಮುಗಿದಿದೆ. ಇನ್ನೋರ್ವ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ. ಜಿ. ರಾಘವನ್ ಕೂಡ ವಾದ ಮುಗಿಸಿದ್ದಾರೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸುವಾಗ ಅಡ್ವೊಕೇಟ್ ಜನರಲ್ ಶಿಫಾರಸಿನ ಅನ್ವಯ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ವಾದಿಸಿದ್ದರು. ಅಲ್ಲದೇ ಹಲವಾರು ಅಂಶ ಉಲ್ಲೇಖಿಸಿದ್ದರು. ಹೀಗಾಗಿ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಸೋಮವಾರ ತಮ್ಮ ವಾದವನ್ನು ಮಂಡಿಸಲಿದ್ದಾರೆ.
ಸಿದ್ದರಾಮಯ್ಯ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅಡ್ವೊಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೇಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದಾರೆ. ಅನುಮತಿ ನೀಡಿರುವುದು ರದ್ದುಗೊಳಿಸಬೇಕು ಎಂದು ಸಿಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.