ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆ ವಿರೋಧಿಸಿ ಸೆ. 12ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ಕೊಟ್ಟಿದೆ.
ಅಮೆರಿಕ ಪ್ರವಾಸ ಕೈಗೊಂಡಿದ್ದ ವೇಳೆ ರಾಹುಲ್ ಗಾಂಧಿ, ಮೀಸಲಾತಿ ನಿಲ್ಲಿಸುವ ವಿಚಾರವಾಗಿ ಮಾತನಾಡಿದ್ದರು. ಇದಕ್ಕೆ ಬಿಜೆಪಿ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದೆ. ಹೀಗಾಗಿ ಅವರ ಹೇಳಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲು ಬಿಜೆಪಿ ಮುಂದಾಗಿದೆ.
ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಈ ವಿಷಯವಾಗಿ ಮಾತನಾಡಿ, ಸಂವಿಧಾನ ರಕ್ಷಣೆ ಮಾಡುತ್ತೇವೆ. ಮೀಸಲಾತಿ ಉಳಿಸುತ್ತೇವೆ ಎಂದೆಲ್ಲ ಹೇಳಿಕೆ ನೀಡುತ್ತಾ ಓಡಾಡುವ ರಾಹುಲ್ ಗೆ ನಾಚಿಕೆಯಾಗಬೇಕು. ರಾಹುಲ್ ಗಾಂಧಿ ಮೀಸಲಾತಿ ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ನಾಳೆ ಮತ್ತು ನಾಡಿದ್ದು ರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಚಿಕ್ಕಮಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ಆಗ್ರಹಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.