ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದ ಕೋಮುಗಲಭೆ ಸಹಜ ಸ್ಥಿತಿಗೆ ಮರಳಿದ್ದರೂ ಪರಿಸ್ಥಿತಿ ಮಾತ್ರ ಬೂದಿ ಮುಚ್ಚಿದ ಕೆಂಡದಂತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿದ್ದು, ಇನ್ನುಳಿದವರಿಗಾಗಿ ತಲಾಶ್ ನಡೆಸಿದ್ದಾರೆ.
ಸಿಸಿಟಿವಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 150 ಕಿಡಿಗೇಡಿಗಳ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. 52 ಜನರನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿದೆ. ತಲೆಮರೆಸಿಕೊಂಡ 97 ಗಲಭೆಕೋರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
150 ಆರೋಪಿಗಳ ಪೈಕಿ 52 ಜನರ ಹೆಸರು, ವಿಳಾಸ ಪತ್ತೆ ಹಚ್ಚಲಾಗಿದೆ. ಬಂಧಿತರ ಪೈಕಿ 30 ಜನ ಮುಸ್ಲಿಂರು, 23 ಹಿಂದೂ ಯುವಕರಿದ್ದಾರೆ. ತಲೆಮರೆಸಿಕೊಂಡ 97 ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಬಂಧಿತ 52 ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹಿರಿಯ ಸಿವಿಲ್ ನ್ಯಾಯಾಧೀಶರು ಆದೇಶಿಸಿದ್ದಾರೆ. ಹೀಗಾಗಿ ಆರೋಪಿಗಳನ್ನು ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.
ಪತಿ, ಮಕ್ಕಳು ಜೈಲಿಗೆ ಹೋಗುತ್ತಿರುವುದನ್ನು ನೋಡಲಾಗದೆ ಹಲವರು ಜೈಲಿನ ಮುಂದೆ ಕಣ್ಣೀರಿಡುತ್ತಿದ್ದರು. ಓರ್ವ ಮಹಿಳೆ ಮಗನನ್ನು ಜೈಲಿಗೆ ಕರೆದುಕೊಂಡು ಹೋಗುತ್ತಿರುವುದನ್ನು ನೋಡಿ ಅಲ್ಲೇ ಕುಸಿದು ಬಿದ್ದಿದ್ದಾರೆ.
ನಾಗಮಂಗಲ ಪಟ್ಟಣ ಉದ್ವಿಗ್ನ ಹಿನ್ನೆಲೆ ನಿನ್ನೆ ಬಿಜೆಪಿ ನಿಯೋಗ ಭೇಟಿ ನೀಡಿತ್ತು. ಇವತ್ತು ಕೇಂದ್ರ ಸಚಿವ ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಾಗಮಂಗಲದಲ್ಲಿ ನಡೆದ ಗಲಭೆ ಖಂಡಿಸಿ ಹಿಂದೂ ಪರ ಸಂಘಟನೆಗಳು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿವೆ.