ಕಲಬುರಗಿ: ಸಚಿವ ಸಂಪುಟ ಸಭೆಯು ಸೆ. 17ರಂದು ಜಿಲ್ಲೆಯಲ್ಲಿ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಸೋಮವಾರವೇ ಜಿಲ್ಲೆಗೆ ತೆರಳಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಈ ಭಾಗದಲ್ಲಿಯೇ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಎಲ್ಲ ಸಮಸ್ಯೆಗಳನ್ನು ಒಂದೇ ಬಾರಿಗೆ ಈಡೇರಿಸಲು ಆಗುವುದಿಲ್ಲ. ನಾಳೆ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಈ ಭಾಗದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಕುರಿತು ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಜನರ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಹೇಳಿದ್ದಾರೆ.
ನಾಗಮಂಗಲ ಗಲಭೆ ಪ್ರಕರಣದ ಕುರಿತು ಮಾತನಾಡಿದ ಅವರು, ನಾಗಮಂಗಲ ಶಾಂತವಾಗಿದೆ. ಯಾವುದೇ ಊಹಾಪೋಹ ಬೇಡ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಓರ್ವ ಡಿವೈಎಸ್ ಪಿ ವರ್ಗಾವಣೆ ಮಾಡಿದ್ದೇವೆ. ರಾಜ್ಯದಲ್ಲಿ ಎಲ್ಲೂ ಹೊತ್ತಿ ಉರಿಯುತ್ತಿಲ್ಲ, ಎಲ್ಲೆಡೆ ಶಾಂತವಾಗಿದೆ. ನಷ್ಟ ಅನುಭವಿಸಿದವರಿಗೆ ಸರ್ಕಾರ ಪರಿಹಾರ ನೀಡುತ್ತದೆ ಎಂದು ಹೇಳಿದ್ದಾರೆ.