ಯಾದಗಿರಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (71) ಇಹಲೋಕ ತ್ಯಜಿಸಿದ್ದಾರೆ.
ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ವೆಂಕಟರೆಡ್ಡಿ ಮುದ್ನಾಳ, ಕಳೆದ ಹಲವು ತಿಂಗಳುಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಬುಧವಾರ ಸ್ವಗ್ರಾಮ ಮುದ್ನಾಳನಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ವೆಂಕಟರೆಡ್ಡಿ ಮುದ್ನಾಳ ಅವರು 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಯಾದಗಿರಿ ಕ್ಷೇತ್ರದಿಂದ ಮೊದಲ ಬಾರಿ ಸ್ಪರ್ಧಿಸಿ ಗೆದ್ದಿದ್ದರು. ಅವರು ಒಂದೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಜಿಲ್ಲೆಯ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಆದರೆ, ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚೆನ್ನಾರೆಡ್ಡಿ ವಿರುದ್ಧ ಮುದ್ನಾಳ ಸೋಲು ಕಂಡಿದ್ದರು.