ತಿರುಪತಿ ದೇವಸ್ಥಾನದಲ್ಲಿ ವಿತರಿಸುವ ಲಡ್ಡುಗಳಲ್ಲಿ ಹಿಂದಿನ ವೈಎಸ್ ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರವು ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
ಬುಧವಾರ ನಡೆದ ಎನ್ ಡಿಎ ಪಕ್ಷದ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು ಹಿಂದಿನ ಸರ್ಕಾರದ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ. ಆದರೆ, ಈ ಆರೋಪಕ್ಕೆ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ವಿಷಯ ಸದ್ಯ ದೇವಸ್ಥಾನದ ಪಾವಿತ್ರ್ಯತೆ ಮತ್ತು ಆಡಳಿತದ ಕುರಿತು ಚರ್ಚೆ ಹುಟ್ಟು ಹಾಕಿದೆ. ಕಳೆದ 5 ವರ್ಷಗಳಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಸಿಎಂ ನಾಯ್ಡು ಆರೋಪಿಸಿದ್ದಾರೆ.
ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿದ್ದರು. ಹೀಗಾಗಿ ದೇವಸ್ಥಾನದ ಪಾವಿತ್ರ್ಯತೆ ಕಾಪಾಡಲು ಪ್ರಯತ್ನಿಸುತ್ತಿದ್ದೇವೆ. ದೇವಾಲಯದ ಸಂಪ್ರದಾಯಗಳನ್ನು ಮರುಸ್ಥಾಪಿಸುವುದರ ಜೊತೆಗೆ, ದೇವಾಲಯವನ್ನು ಉಳಿಸಿಕೊಳ್ಳಲು ಸರ್ಕಾರವು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.