ಅಯೋಧ್ಯೆ: ಅಯೋಧ್ಯೆ ರಾಮನ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಹೀಗಾಗಿ ರಾಮ ಮಂದಿರದ ಬಾಕಿ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗುತ್ತಿದೆ. ಈ ವರ್ಷದ ಅಂತ್ಯಕ್ಕೆ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.
ಮಂದಿರದ ಮೊದಲನೇ ಮಹಡಿಯ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಕಾಮಗಾರಿ ಈ ವರ್ಷದ ಡಿಸೆಂಬರ್ ಅಂತ್ಯಕ್ಕೆ ಮುಗಿಯಲಿದೆ. ಭಗವಾನ್ ರಾಮ, ಸೀತೆ, ಲಕ್ಷ್ಮಣ, ಹನುಮಂತ, ಭರತ, ಶತ್ರುಘ್ನರ ಅಮೃತ ಶಿಲೆಯ ವಿಗ್ರಹಗಳನ್ನು ಒಳಗೊಂಡ ‘ರಾಮ ದರ್ಬಾರ್’ನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ 2025ನೇ ಜನವರಿ 22ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಮೂಲಗಳು ತಿಳಿಸಿವೆ.
ರಾಜಸ್ಥಾನದ ಜೈಪುರದ ಅಮೃತಶಿಲೆಯಲ್ಲಿ ತಲೆಯತ್ತಲಿರುವ ರಾಮ ದರ್ಬಾರ್ ವಿಗ್ರಹಗಳ ಎತ್ತರವು ಸುಮಾರು 4.5 ಅಡಿ ಎತ್ತರ ಇರಲಿದೆ ಎನ್ನಲಾಗಿದೆ. ಹೀಗಾಗಿ ಮೊದಲ ಮಹಡಿಯ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ ಎಂಬುದನ್ನು ಕಟ್ಟಡ ನಿರ್ಮಾಣ ಸಮಿತಿಯ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಹೇಳಿದ್ದಾರೆ.
ರಾಮಮಂದಿರದಲ್ಲಿ 2024ರ ಜನವರಿ 22ರಂದು ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ನಡೆದಿತ್ತು. ಹೀಗಾಗಿ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಯಾತ್ರಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. 2024ರ ಮೊದಲ 7 ತಿಂಗಳಲ್ಲಿ 12 ಕೋಟಿಗೂ ಅಧಿಕ ಭಕ್ತರು, ಪ್ರವಾಸಿಗರು ಭೇಟಿ ನೀಡಿದ್ದಾರೆ. ಹೀಗಾಗಿ ಉತ್ತರ ಪ್ರದೇಶದ ಇನ್ನಿತರ ಪ್ರವಾಸಿ ತಾಣಗಳಿಗೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.