ಬೆಂಗಳೂರು: ರಾಜ ರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ಒಂದರ ಮೇಲೆ ಒಂದರಂತೆ ಸಂಕಷ್ಟ ಎದುರಾಗುತ್ತಿವೆ. ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಅವರನ್ನು ಎಸ್ ಐಟಿ ವಶಕ್ಕೆ ಪಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಆರಂಭವಾಗಿದ್ದು, ಅಧಿಕಾರಿಗಳ ಪ್ರಶ್ನೆಗೆ ಸರಿಯಾಗಿ ಉತ್ತರಿಸಿಲ್ಲ ಎಂದು ತಿಳಿದು ಬಂದಿದೆ.
ಮಂಗಳವಾರವಷ್ಟೇ ಜನಪ್ರತಿನಿಧಿಗಳ ನ್ಯಾಯಾಲಯವು ಎಸ್ ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು. ಹೀಗಾಗಿ ಎಸ್ ಐಟಿ ಅಧಿಕಾರಿಗಳು ಮುನಿರತ್ನ ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ರಾತ್ರಿಯಿಡೀ ಮುನಿರತ್ನ ಅವರ ವಿಚಾರಣೆ ನಡೆಸಿದೆ ಎಂದು ತಿಳಿದು ಬಂದಿದೆ.
ಅತ್ಯಾಚಾರ ಪ್ರಕರಣಕ್ಕೂ ಮೊದಲು ದಾಖಲಾಗಿದ್ದ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಗೂ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ವಿಚಾರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಸಂತ್ರಸ್ತೆಯ ಪರಿಚಯ ಇತ್ತಾ? ಅವರೊಂದಿಗೆ ಒಡನಾಟವಿತ್ತಾ? ಗುತ್ತಿಗೆದಾರರ ಬಗ್ಗೆ ಸೇರಿದಂತೆ ಅಧಿಕಾರಿಗಳು ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ, ಮುನಿರತ್ನ ಮಾತ್ರ ಆರೋಪಗಳನ್ನೆಲ್ಲ ಅಲ್ಲಗಳೆದಿದ್ದಾರೆ ಎಂದು ತಿಳಿದು ಬಂದಿದೆ.
ರಾಜಕೀಯ ದುರುದ್ದೇಶದಿಂದ ತಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ನನಗೆ ಏನೂ ತಿಳಿದಿಲ್ಲ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಲಾಗಿದೆ ಎಂದಷ್ಟೇ ಉತ್ತರಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಮುನಿರತ್ನ ಅವರ ಮೊಬೈಲ್ ನ್ನು ವಶಕ್ಕೆ ಪಡೆದು ಸೈಬರ್ ತಜ್ಞರಿಗೆ ಕಳುಹಿಸಲಾಗಿದೆ. ಮುನಿರತ್ನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅ. 1ಕ್ಕೆ ಕೋರ್ಟ್ ಅರ್ಜಿ ವಿಚಾರಣೆ ಮುಂದೂಡಿದೆ.