ಬೆಂಗಳೂರು: 14 ಸೈಟ್ ಗಳನ್ನು ಮರಳಿ ನೀಡಲು ಪತ್ರ ಬರೆದಿರುವ ನನ್ನ ಪತ್ನಿಯ ನಿರ್ಧಾರ ಆಶ್ಚರ್ಯ ತಂದಿದೆ ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಹೇಳಿದ್ದಾರೆ.
ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದು ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಮಾಡಿದ್ದಾರೆ. 14 ಸೈಟ್ ಗಳನ್ನು ಪಾರ್ವತಿ (Parvathi) ಮರಳಿ ಮುಡಾಕ್ಕೆ (MUDA Case) ನೀಡಿದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ರಾಜಕಾರಣ, ಸತ್ಯಮೇವ ಜಯತೆ ಎಂದು ಹ್ಯಾಶ್ ಟ್ಯಾಗ್ ಬಳಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಬರೆದುಕೊಂಡಿರುವ ಸಿಎಂ,ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಹಿಂದಿರುಗಿಸಿದ್ದಾರೆ. ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನರಿಗೂ ತಿಳಿದಿದೆ. ಆದರೆ, ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಡಬೇಕೆಂದು ನಾನು ನಿರ್ಧರಿಸಿದ್ದೆ. ಆದರೆ, ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ.
ನಾಲ್ಕು ದಶಕಗಳ ನನ್ನ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆ ಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ, ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ತುಂಬಾ ವಿಷಾದವಿದೆ. ಈ ಎಲ್ಲ ಸತ್ಯ- ಅಸತ್ಯಗಳ ಮಧ್ಯೆ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.