ನವದೆಹಲಿ: ಮುಡಾ ಹಗರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಅಲೆ ಸೃಷ್ಟಿಸುತ್ತಿದೆ. ಈ ಮಧ್ಯೆ ವಿಪಕ್ಷಗಳು ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪಟ್ಟು ಹಿಡಿದಿವೆ. ಈ ಬೆಳವಣಿಗೆಗಳ ಕಾಂಗ್ರೆಸ್ ನಲ್ಲಿ ಮಾತ್ರ ಕುರ್ಚಿಗಾಗಿ ಗುದ್ದಾಟ ಶುರುವಾದಂತೆ ಕಾಣುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಸಂದರ್ಭದಲ್ಲೇ ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ನಾಯಕರು ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಖರ್ಗೆ ಮಾತ್ರವಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನೂ ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚಿಸಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆಯ ಚರ್ಚೆಗಳು ಹಾಗೂ ಇತರ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷರು ಹಾಗೂ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಈಗ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗುತ್ತಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅ. 15ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಪಕ್ಷದಲ್ಲಿ ಉಂಟಾಗಿರುವ ಗೊಂದಲ ಬಗ್ಗೆ ಚರ್ಚಿಸಲು ಅವರು ಬೆಂಗಳೂರಿಗೆ ಬರುತ್ತಿದ್ದಾರೆ ಎದು ತಿಳಿದು ಬಂದಿದೆ. ಪಕ್ಷದಲ್ಲಿ ಉಂಟಾಗಿರುವ ಗೊಂದಲ, ಸಿಎಂ ಬದಲಾವಣೆ ವದಂತಿ, ದಲಿತ ನಾಯಕರ ಮೀಟಿಂಗ್ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಕೂಡ ತಿಳಿದು ಬಂದಿದೆ.