ವಿಜಯಪುರ: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಮನಗೂಳಿ ನಿವಾಸಿ ಭೀಮಶಿ ಹಿಟ್ನಳ್ಳಿ(56) ಹಾಗೂ ಖಂಡೋಬಾ(60) ಸಾವನ್ನಪ್ಪಿರುವ ದುರ್ದೈವಿಗಳು. ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
ಅಪಘಾತದಿಂದಾಗಿ ರೊಚ್ಚಿಗೆದ್ದ ಜನರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಕೆಲ ಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬೈಕ್ ಸವಾರರ ಕುಟುಂಬಕ್ಕೆ ಪರಿಹಾರ ನೀಡಬೇಕು. ಈ ಭಾಗದಲ್ಲಿ ಮೇಲ್ಸೆತುವೆ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.