ಗದಗ: ಯುವಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ವಿರಪಾಪೂರ ತಾಂಡಾದ ನಿವಾಸಿ ವಂದನಾ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಅದೇ ಗ್ರಾಮದ ಕಿರಣ್ ಎಂಬಾತನಿಂದಾಗಿ ಕಿರುಕುಳ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವಂದನಾ ಜಿಮ್ಸ್ ನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹೀಗಾಗಿ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನಲ್ಲಿದ್ದಳು. ಆದರೆ, ಪ್ರೀತ್ಸೆ..ಪ್ರೀತ್ಸೆ ಅಂತಾ ಹಿಂದೆ ಬಿದ್ದು, ನನ್ನೊಂದಿಗೆ ಮದುವೆಯಾಗು ಎಂದು 19 ವರ್ಷದ ವಂದನಾಗೆ, 47 ವರ್ಷದ ಕಿರಣ ಕಾಟ ನೀಡುತ್ತಿದ್ದ ಎನ್ನಲಾಗಿದೆ. ಮದುವೆಯಾಗದಿದ್ದರೆ, ಫೋಟೋಗಳನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ನಿನ್ನ ಮಾನ, ಮರ್ಯಾದೆ ಹರಾಜು ಮಾಡುತ್ತೇನೆ ಎಂದು ಹೆದರಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
ಇದರಿಂದ ರೋಸಿ ಹೋಗಿದ್ದ ವಂದನಾ, ಫಿನಾಯಿಲ್ ಸೇವಿಸಿದ್ದಾಳೆ. ಕೂಡಲೇ ಸಹಪಾಠಿಗಳು ಹಾಗೂ ಹಾಸ್ಟೆಲ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವಂದನಾ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಈ ಕುರಿತು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.