ಶಿವಮೊಗ್ಗ : ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಯ ಗಡಿ ಭಾಗದಲ್ಲಿರುವ ಪ್ರಸಿದ್ಧ ಹುಲಿಕಲ್ (ಬಾಳೆಬಾರೆ) ಘಾಟಿಯಲ್ಲಿ ಇಂದು ಬೆಳಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಚಲಿಸುತ್ತಿದ್ದ ಖಾಸಗಿ ಬಸ್ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುಲಿಕಲ್ ಘಾಟಿ ಪ್ರದೇಶದಲ್ಲಿ ಮಧ್ಯಾಹ್ನ ಸುಮಾರು 11:30ರ ವೇಳೆಗೆ ಚಲಿಸುತ್ತಿದ್ದ ಶ್ರೀ ದುರ್ಗಾಂಬ ಬಸ್‌ನ ಇಂಜಿನ್ ಭಾಗದಲ್ಲಿ ಮೊದಲು ಹೊಗೆ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ವಾಹನಕ್ಕೆ ವ್ಯಾಪಿಸಿ ಬಸ್ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ.
ಅಪಾಯದ ಮುನ್ಸೂಚನೆ ಅರಿತ ಚಾಲಕ ತಕ್ಷಣ ಬಸ್ ನಿಲ್ಲಿಸಿ, ಸಿಬ್ಬಂದಿಯ ಸಹಾಯದಿಂದ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ.
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಶ್ರೀ ದುರ್ಗಾಂಬ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ವಾಹನಕ್ಕೆ ಭಾರೀ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಯಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : ಅರಣ್ಯದಲ್ಲಿ ಕಿರು ಉತ್ಪನ್ನ ಸಂಗ್ರಹಿಸುತ್ತಿದ್ದ ವೇಳೆ ಕರಡಿ ದಾಳಿ : ಆದಿವಾಸಿ ವ್ಯಕ್ತಿಗೆ ಗಂಭೀರ ಗಾಯ!


















