ಚೆನ್ನೈ: ಹೈಸ್ಕೂಲು ವಿದ್ಯಾರ್ಥಿನಿಯೊಬ್ಬಳ ಮೇಲೆ ಆಕೆ ವ್ಯಾಸಂಗ ಮಾಡುತ್ತಿದ್ದ ಶಾಲೆಯ ಮೂವರು ಶಿಕ್ಷಕರೇ ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆಯೊಂದು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ. ಈ ಅಮಾನವೀಯ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಸ್ಥಳೀಯರು ಹಾಗೂ ಬಾಲಕಿಯ ಸಂಬಂಧಿಕರು ಪ್ರತಿಭಟನೆ ನಡೆಸುವ ಮೂಲಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೂವರು ಆರೋಪಿಗಳನ್ನೂ ಬಂಧಿಸಿದ್ದಾರೆ. ಬಾಲಕಿಯ ತಾಯಿ ನೀಡಿರುವ ದೂರಿನ ಮೇರೆಗೆ ಪೋಕ್ಸೋ(ಲೈಂಗಿಕ ಅಪರಾಧಗಳಿಗೆ ಮಕ್ಕಳ ರಕ್ಷಣೆ ಕಾಯ್ದೆ) ಕಾಯ್ದೆಯಡಿ ಮೂವರು ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

ಕಳೆದ ಒಂದು ತಿಂಗಳಿಂದ ಹೈಸ್ಕೂಲು ವಿದ್ಯಾರ್ಥಿನಿ ಶಾಲೆಗೆ ಹೋಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಶಾಲಾ ಪ್ರಾಂಶುಪಾಲರು ಆಕೆಯ ಕುಟುಂಬವನ್ನು ಸಂಪರ್ಕಿಸಿ, ಮಗಳೇಕೆ ಶಾಲೆಗೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಆಗ ಸಂತ್ರಸ್ತೆಯ ತಾಯಿಯು ತಮ್ಮ ಮಗಳ ಮೇಲಾದ ಕ್ರೌರ್ಯವನ್ನು ಬಹಿರಂಗಪಡಿಸಿದ್ದಾರೆ.
ಕೂಡಲೇ ಪ್ರಾಂಶುಪಾಲರು, ಈ ಕುರಿತು ಪೊಲೀಸರಿಗೆ ದೂರು ನೀಡಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಯ ಗಮನಕ್ಕೂ ತರುವಂತೆ ಸಂತ್ರಸ್ತೆಯ ತಾಯಿಗೆ ಸೂಚಿಸಿದ್ದಾರೆ. ಅದರಂತೆ, ಆಕೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪ್ರಸ್ತುತ ಬಾಲಕಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಕೃಷ್ಣಗಿರಿಯ ಸರ್ವ ಮಹಿಳಾ ಪೊಲೀಸ್ ತಂಡವು ಆರೋಪಿ ಶಿಕ್ಷಕರನ್ನು ಬಂಧಿಸಿದ್ದು, ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು 15 ದಿನಗಳ ಕಾಲ ಪೊಲೀಸ್ ವಶಕ್ಕೊಪ್ಪಿಸಿದೆ.