ಬೆಂಗಳೂರು : ಬೆಳಿಗ್ಗೆ ವೆಲ್ಡಿಂಗ್ ಕೆಲಸ ಮಾಡಿ, ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿರುವ ಘಟನೆ HAL ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರೂಪಕ್ ಬಾಬು ಎಂಬ ನೇಪಾಳಿ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತನ ಮುಖ್ಯ ಟಾರ್ಗೆಟ್ ಕ್ಯಾಬ್ ಮತ್ತು ಲಾರಿ ಡ್ರೈವರ್‌ಗಳಾಗಿದ್ದು, ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದನು. ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಕಾರು ಮತ್ತು ಲಾರಿಗಳ ಡ್ಯಾಶ್‌ಬೋರ್ಡ್‌ಗಳನ್ನು ಒಡೆದು, ಒಳಗಿದ್ದ ಮೊಬೈಲ್‌ಗಳನ್ನು ಕದ್ದುಕೊಂಡು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನ ವಿರುದ್ಧ ಈಗಾಗಲೇ 4 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ವೇಳೆ ಹಲವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಯಿಂದ ಒಟ್ಟು 64 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಮೊಬೈಲ್‌ಗಳ ಒಟ್ಟು ಮೌಲ್ಯ ಸುಮಾರು 16 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ರಾಜಧಾನಿಯಲ್ಲಿ ನಿಲ್ಲದ ಬೀದಿ ನಾಯಿಗಳ ಉಪಟಳ : ಹೈರಾಣಾದ ಸಾರ್ವಜನಿಕರು



















