ಶಿವಮೊಗ್ಗ: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಭಾರೀ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸುಟ್ಟು ಭಸ್ಮವಾಗಿರುವ ಘಟನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಇಂದು ನಡೆದಿದೆ.
ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಮುಖ್ಯ ರಸ್ತೆಯಲ್ಲಿ ವಿಪರೀತ ತಿರುವುಗಳಿರುವ ಜಾಗದಲ್ಲಿ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಕೂಡಲೇ ಕೆಳಗಿಳಿದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.
ಮಾಹಿತಿಯ ಪ್ರಕಾರ, ಚಲಿಸುತ್ತಿದ್ದ ಬಸ್‌ನ ಇಂಜಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ್ದು, ನೋಡನೋಡುತ್ತಿದ್ದಂತೆಯೇ ಬಸ್ ಬೆಂಕಿಯ ಹತ್ತಿಕೊಂಡಿದೆ. ಘಟನೆ ನಡೆದ ವೇಳೆ ಬಸ್ಸಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ.
ಇಂಜಿನ್‌ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಯಲು ಸೂಚಿಸಿದ್ದಾರೆ. ಇದರಿಂದಾಗಿ ಎಲ್ಲರೂ ಸುರಕ್ಷಿತವಾಗಿ ಹೊರಬಂದಿದ್ದಾರೆ. ಈ ದೃಶ್ಯವನ್ನು ಇದೇ ಮಾರ್ಗದಲ್ಲಿ ಸಾಗುತ್ತಿದ್ದ ಪ್ರಯಾಣಿಕರೊಬ್ಬರು ಚಿತ್ರೀಕರಿಸಿದ್ಧಾರೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : 67 ವರ್ಷಗಳಲ್ಲಿ ಮೊದಲ ಬಾರಿ.. ಐತಿಹಾಸಿಕ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮು-ಕಾಶ್ಮೀರ!



















