ವಿಜಯಪುರ: ಇತ್ತೀಚೆಗೆ ಆತ್ಮಹತ್ಯೆಯ ಹಲವಾರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಎಲ್ಲರಿಗೂ ಬುದ್ಧಿ ಹೇಳಬೇಕಾದ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ.
ಸರ್ಕಾರಿ ಶಾಲೆಯ ಸ್ಟಾಕ್ ರೂಮ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯರ ಶವ ಪತ್ತೆಯಾಗಿದೆ. ಜಿಲ್ಲೆಯ ಬಸನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮುಖ್ಯೋಪಾಧ್ಯಾಯ ಸಿ.ಎಸ್. ಹಡಪದ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದವರು. ಈ ಶಿಕ್ಷಕ ಕಳೆದ ಎರಡು ವರ್ಷಗಳಿಂದ ನಾಗೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಿ.ಎಸ್. ಹಡಪದ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಶಾಲೆಯ ಎಸ್ಡಿಎಂಸಿ ಅಧ್ಯಕ್ಷರ ಕಿರುಕುಳದಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆಂದು ಆರೋಪಿಸಿದ್ದಾರೆ.
ಈ ಕುರಿತು ಶಿಕ್ಷಕರು ಕೂಡ ತನಿಖೆಗೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಬಸವನಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.