ಬೆಂಗಳೂರು : ಆಗಸ್ಟ್ ಆರಂಭದಲ್ಲೇ ರಾಜ್ಯದ ಬಸ್ ಪ್ರಯಾಣಿಕರಿಗೆ ದರ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆ ಇದೆ. ಡೀಸೆಲ್ ಬೆಲೆ ಏರಿಕೆಯಿಂದ ಹೆಚ್ಚುತ್ತಿರುವ ಆರ್ಥಿಕ ಹೊರೆ ನಿಭಾಯಿಸಲು ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.
ಮಧ್ಯಪ್ರಾಚ್ಯದ ಯುದ್ಧದ ಪರಿಣಾಮ ಡೀಸೆಲ್ ದರವು ಪ್ರತಿ ಲೀಟರ್‌ಗೆ ಸುಮಾರು ₹8 ಏರಿಕೆಯಾಗಿದ್ದು, ಇದರಿಂದ ನಾಲ್ಕು ಸಾರಿಗೆ ನಿಗಮಗಳ ಮೇಲೂ ಕೋಟ್ಯಂತರ ರೂಪಾಯಿ ಹೆಚ್ಚುವರಿ ಹೊರೆ ಬಿದ್ದಿದೆ. ಈ ಕಾರಣದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದಿಂದ ಹೊರಬರಲು ಬಸ್ ದರ ಪರಿಷ್ಕರಣೆ ಅಗತ್ಯವಾಗಿದೆ ಎಂದು ಸರ್ಕಾರದ ಗಮನಕ್ಕೆ ತರಲಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ, ಕೆಎಸ್‌ಆರ್‌ಟಿಸಿ 33% ಹಾಗೂ ಬಿಎಂಟಿಸಿ 44% ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಅನುಮತಿ ನೀಡುವಂತೆ ಕೋರಲಾಗಿದೆ. ಉಳಿದ ಎರಡು ನಿಗಮಗಳೂ ದರ ಪರಿಷ್ಕರಣೆಗೆ ಒತ್ತಾಯಿಸಿವೆ. ಪ್ರಸ್ತುತ ಡೀಸೆಲ್ ದರ ಏರಿಕೆಯಿಂದ ನಾಲ್ಕು ನಿಗಮಗಳಿಗೆ ತಿಂಗಳಿಗೆ ಸುಮಾರು ₹40 ಕೋಟಿ ನಷ್ಟ ಉಂಟಾಗುತ್ತಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ವಾರ್ಷಿಕವಾಗಿ ಸುಮಾರು ₹480 ಕೋಟಿ ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ನಿಗಮಗಳು ಅಂದಾಜಿಸಿವೆ.
ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡದಿದ್ದರೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಹಾಗೂ ಕೆಕೆಆರ್‌ಟಿಸಿ ನಿಗಮಗಳನ್ನು ಆರ್ಥಿಕವಾಗಿ ಸಮರ್ಥವಾಗಿ ನಡೆಸುವುದು ಕಷ್ಟವಾಗಲಿದೆ ಎಂದು ನಾಲ್ಕು ನಿಗಮಗಳ ಅಧಿಕಾರಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸರ್ಕಾರ ಈ ಕುರಿತು ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?



















