ಬೆಳಗಾವಿ: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಜನ- ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.
ಬೆಳಗಾವಿ(Belagavi) ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವೆಡೆ ಜನರು ಪರಿತಪಿಸುತ್ತಿದ್ದಾರೆ. ಜುಲೈ 25 ಹಾಗೂ 26ರಂದು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದರಿಂದಾಗಿ ಜಿಲ್ಲೆಯ ಕೆಲವು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ, ಖಾನಾಪುರ, ನಿಪ್ಪಾಣಿ, ಚಿಕ್ಕೋಡಿ, ಬೈಲಹೊಂಗಲ, ಕಿತ್ತೂರು ತಾಲೂಕುಗಳಲ್ಲಿನ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಮಾಂಗವಸ್ತಿ ಗ್ರಾಮಗಳು ಕೃಷ್ಣಾ ನದಿ ಸುತ್ತುವರೆದು ನಡುಗಡ್ಡೆಯಂತಾಗಿದೆ. ದಡದಲ್ಲಿ ನಿಂತು ಗ್ರಾಮಸ್ಥರಿಗೆ ಸ್ಥಳಾಂತರವಾಗುವಂತೆ ತಹಶೀಲ್ದಾರ್, ಪೊಲೀಸರು ಮನವಿ ಮಾಡಿದ್ದಾರೆ. ಆದರೆ, ಬೇರೆ ಕಡೆ ಜಾಗ ತೋರಿಸಿ ಹಕ್ಕು ಪತ್ರ ನೀಡಬೇಕು. ಅಲ್ಲಿವರೆಗೂ ಸ್ಥಳಾಂತರ ಆಗಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲೂ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ.