ಉದಯಪುರ: ಶಾಲೆಯಲ್ಲಿ ವಿದ್ಯಾರ್ಥಿಗೆ ಚಾಕು ಇರಿದ ಭಯಾನಕ ಘಟನೆಯೊಂದು ನಡೆದಿದೆ.
ರಾಜಸ್ಥಾನ (Rajasthan)ಉದಯಪುರದ (Udaipur) ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, 15 ವರ್ಷದ ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದಾಗಿ ಆಕ್ರೋಶಗೊಂಡ ಜನರ ಗುಂಪೊಂದು ಸುಮಾರು ಆರೇಳು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ನಗರದ ಕೆಲವು ಭಾಗಗಳಲ್ಲಿ ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ. ಊಟದ ವಿರಾಮದ ಸಂದರ್ಭದಲ್ಲಿ ನಡೆದ ಜಗಳದಲ್ಲಿ ಅಪ್ರಾಪ್ತ ವಯಸ್ಕನಿಗೆ ಮತ್ತೊಬ್ಬ ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ವಿದ್ಯಾರ್ಥಿಯ ತೊಡೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.
ಗಾಯಾಳು ವಿದ್ಯಾರ್ಥಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ ಬಳಿ ಅಪಾರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಜನರು ಉದ್ರಿಕ್ತಗೊಂಡಿದ್ದರಿಂದಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಚಾಕು ಇರಿತಕ್ಕೊಳಗಾದ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ನಾನು ನಿವಾಸಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಅಲ್ಲಿಯ ಜಿಲ್ಲಾಧಿಕಾರಿ ಅರವಿಂದ್ ಪೋಸ್ವಾಲ್ ಹೇಳಿದ್ದಾರೆ. ಅಲ್ಲದೇ, ಘಟನೆಗೆ ಸಂಬಂಧಿಸಿದಂತೆ ಬಾಲಕ ಹಾಗೂ ಆತನ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.