ಬೆಂಗಳೂರು: ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೂಢೀಕರಿಸುವುದಕ್ಕಾಗಿ ಬಡವರ ಹೊಟ್ಟೆಯ ಮೇಲೆ ಬರೆ ಎಳೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅರು, ರಾಜ್ಯದಲ್ಲಿ ಇಲ್ಲಿಯವರೆಗೆ 15 ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೂಢೀಕರಿಸಲು ಆಗುತ್ತಿಲ್ಲ. ಇದರಿಂದಾಗಿ ಕೈ ಚೆಲ್ಲಿರುವ ಅವರು ಈ ರೀತಿ ಕಾರ್ಡ್ ಗಳನ್ನು ರದ್ದು ಮಾಡಿ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಹಣ ಇಲ್ಲ ಎಂದು ಆರೋಪಿಸಿದ್ದಾರೆ.
ಆಪರೇಷನ್ ಕಮಲದ ಕುರಿತು ಮಾತನಾಡಿದ ಅವರು, ಬಿಜೆಪಿ ಆಪರೇಶನ್ ಮಾಡುತ್ತಿಲ್ಲ. ಕಾಂಗ್ರೆಸ್ ನಲ್ಲಿ ಅಸಮಾಧಾನ ಕುದಿಯುತ್ತಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಸಿಎಂ ಅನುದಾನ ನೀಡುತ್ತಿಲ್ಲ. ಹೀಗಾಗಿ ಸಿಎಂ ವಿರುದ್ಧ ಹಲವು ಶಾಸಕರು ಕೋಪಗೊಂಡಿದ್ದಾರೆ. ಹೀಗಾಗಿ ಹಲವರು ಸಿಎಂ ಆಗೋಕೆ ಪೈಪೋಟಿ ನಡೆಸುತ್ತಿದ್ದಾರೆ. ಇದನ್ನು ಡೈವರ್ಟ್ ಮಾಡಲು ಸಿಎಂ ಈ ರೀತಿ ಬಿಜೆಪಿಯ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ವಕ್ಫ್ ವಿಚಾರದಲ್ಲೂ ಬಡವರು, ಹಿಂದೂಗಳ ಭಾವನೆ ಕೆರಳಿಸುವಂತೆ ಮಾಡುತ್ತಿದೆ. ಮತ್ತೊಂದೆಡೆ ರೈತರ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಇದನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದೆ. ಹೀಗಾಗಿ ನ. 21ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.