ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್‌ನಲ್ಲಿ ಭಾರೀ ರಾಜಕೀಯ ಗೊಂದಲ ಸ್ಫೋಟಗೊಂಡಿದ್ದು, ಪಕ್ಷದ ಅಲ್ಪಸಂಖ್ಯಾತ ಘಟಕದಲ್ಲಿ ಮಹತ್ವದ ಬದಲಾವಣೆಗಳು ನಡೆದಿವೆ.
ಉಪಚುನಾವಣೆ ಬಳಿಕ ಮುಸ್ಲಿಂ ನಾಯಕರ ನಡುವಿನ ಭಿನ್ನಮತ ಬಹಿರಂಗವಾಗಿದ್ದು, ಸಚಿವ ಜಮೀರ್ ಹಾಗೂ ಅಬ್ದುಲ್ ಜಬ್ಬಾರ್ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಈ ಬೆಳವಣಿಗೆಯ ನಡುವೆಯೇ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜಬ್ಬಾರ್ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅಂಗೀಕರಿಸಿದ್ದು, ತಕ್ಷಣವೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ. ಈ ನಿರ್ಧಾರ ಕಾಂಗ್ರೆಸ್ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಘಟಕದ ಹಲವು ಪದಾಧಿಕಾರಿಗಳು ಕೂಡ ಹುದ್ದೆ ತ್ಯಜಿಸಿದ್ದಾರೆ. ಉಪಾಧ್ಯಕ್ಷ ಮಹಮ್ಮದ್ ಸಿರಾಜ್ ಸೇರಿದಂತೆ ಕಾರ್ಯದರ್ಶಿಗಳಾದ ಅಬ್ದುಲ್ ಗನಿ ತಾಹೀರ್, ನೂರ್ ಅಹ್ಮದ್ ಹಾಗೂ ಹುಸೇನ್ ಉಕ್ಕಡಗಾತ್ರಿ ರಾಜೀನಾಮೆ ನೀಡಿದ್ದಾರೆ.
ಇದರ ನಡುವೆ, ಉಪಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ಮೇಲೂ ಒತ್ತಡ ಹೆಚ್ಚಾಗಿದೆ. ಜೊತೆಗೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಮೇಲೂ ಕ್ರಮ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ, ಡಿ.ಕೆ. ಶಿವಕುಮಾರ್ ಕೈಗೊಂಡ ‘ಮೇಜರ್ ಸರ್ಜರಿ’ ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಸಮೀಕರಣಗಳಿಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬದಲಾವಣೆಗಳ ನಿರೀಕ್ಷೆ ಮೂಡಿಸಿದೆ.
ಮುಸ್ಲಿಂ ನಾಯಕರಲ್ಲಿ ಭಿನ್ನಮತ ಸ್ಫೋಟ
ದಾವಣಗೆರೆ ದಕ್ಷಣ ಬೈ ಎಲೆಕ್ಷನ್ ಸಂಬಂಧ ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಅಲ್ಲದೇ ಬಣ ರಾಜಕೀಯ ಸಹ ಶುರುವಾಗಿದೆ. ಡಿಕೆ ಶಿವಕುಮಾರ್ ಬಣದ ರಿಜ್ವಾನ್ ಅರ್ಷದ್, ಸಲೀಂ ಅಹಮ್ಮದ್ ಸುದ್ದಿಗೋಷ್ಠಿ ನಡೆಸಿ ತಮ್ಮದೇ ಸಮುದಾಯದ ನಾಯಕರ ವಿರುದ್ಧ ಬಹಿರಂಗವಾಗಿ ಗಂಭೀರ ಆರೋಪ ಮಾಡಿದ್ದಾರೆ. ದಾವಣಗೆರೆ ಬೈ ಎಲೆಕ್ಷನ್ ನಮ್ಮ ಪಕ್ಷದ ಹಿರಿಯರು ಕೆಲಸ ಮಾಡಿಲ್ಲ ಎಂದು ಪರೋಕ್ಷವಾಗಿ ಸಚಿವ ಜಮೀರ್ ಅಹಮ್ಮದ್ ಖಾನ್, ಅಬ್ದುಲ್ ಜಬ್ಬರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ಹೈಕಮಾಂಡ್ಗೂ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಅಬ್ದುಲ್ ಜಬ್ಬರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರೊಂದಿಗೆ ಇದೀಗ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣ ರಾಜಕೀಯಲ್ಕೆ ಮುನ್ನುಡಿ ಬರೆದಂತಾಗಿದೆ.
ಮೊನ್ನೆಯಷ್ಟೇ ಸಲೀಂ ಅಹ್ಮದ್, ರಿಜ್ವಾನ್ ಅರ್ಷದ್ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದರು.. ದಾವಣಗೆರೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧವೇ ಷಡ್ಯಂತ್ರ ಮಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳು ನಡೆದಿವೆ ಎಂಬ ಆರೋಪ ಕೇಳಿಬಂದಿತ್ತು.. ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಆಂತರಿಕ ಬೆಳವಣಿಗೆ ಬಗ್ಗೆ ಹೈಕಮಾಂಡ್ ವರದಿ ತರಿಸಿಕೊಂಡಿತ್ತು.. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಬಿಷೇಕ್ ದತ್ ವರದಿ ನೀಡಿದ್ರು. ಈ ವರದಿ ಕೈ ಸೇರುತ್ತಿದ್ದಂತೆ ಹೈಕಮಾಂಡ್ ಆ್ಯಕ್ಷನ್ ತೆಗೆದುಕೊಂಡಿದೆ. ಸಿಎಂ ರಾಜಕೀಯ ಕಾರ್ಯದರ್ಶಿಯಾಗಿರುವ ಮತ್ತು ಜಮೀರ್ ಆಪ್ತರು ಆಗಿರೋ ನಜೀರ್ ಅಹ್ಮದ್‌ಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ತಾಕೀತು ಮಾಡಿದೆ.
ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಮತ್ತು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಇಬ್ಬರು ಜಮೀರ್ ಆಪ್ತರು. ಹೀಗಾಗಿ ಮುಂದಿನ ಆ್ಯಕ್ಷನ್ ಜಮೀರ್ ವಿರುದ್ಧವೇ ಎಂದ ಹೇಳಲಾಗ್ತಿದೆ.. ಯಾಕಂದ್ರೆ, ಜಮೀರ್ ಸೇರಿ ಹಲವು ಮುಸ್ಲಿಂ ಮುಖಂಡರು ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅನ್ನ ಮುಸ್ಲಿಂ ಸಮುದಾಯಕ್ಕೆ ನೀಡಬೇಕು ಎಂದು ಒತ್ತಾಯಿಸಿದ್ದರು. ಆದ್ರೆ, ಸಮರ್ಥ್ಗೆ ಟಿಕೆಟ್ ಸಿಕ್ಕ ಕಾರಣ ಬೇಸರಗೊಂಡಿದ್ದ ಜಮೀರ್, ಪ್ರಚಾರದಿಂದ ದೂರ ಉಳಿದಿದ್ದರು. ಈಗ ಕ್ಷೇತ್ರದಲ್ಲಿ ಪ್ರಚಾರ ಮಾಡದ ಆರೋಪದಲ್ಲಿ ಜಮೀರ್ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಸಚಿವ ಸಂಪುಟ ಪುನಾರಚನೆ ವೇಳೆ ಜಮೀರ್ ತಲೆತಂಡ ಖಚಿತ ಎನ್ನಲಾಗಿದೆ.
ಒಟ್ಟಿನಲ್ಲಿ ದಾವಣಗೆರೆ ದಕ್ಷಿಣದ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಒಳಗಿನ ಬೇಗುದಿ ಸ್ಫೋಟಗೊಂಡಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಹೋಗಿ ನಿಲ್ಲುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.
ಇದನ್ನೂ ಓದಿ : ಸಾಲು ಸಾಲು ರ್‍ಯಾಲಿಗಳನ್ನು ರದ್ದುಗೊಳಿಸುತ್ತಿರುವ ನಟ ವಿಜಯ್ – ಡಿಎಂಕೆಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯಂಗ್ಯ



















