ಮಂಡ್ಯ : ಕೆಎಸ್ಆರ್ಟಿ ಬಸ್ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮಾಚಹಳ್ಳಿ ಗ್ರಾಮದ ಸಮೀಪ ನಡೆದಿದೆ. ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.
ಚನ್ನಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಮುಗಿಸಿ ಮದ್ದೂರು ಕಡೆಗೆ ವಾಪಸ್ ಬರುತ್ತಿದ್ದ ನೂರಕ್ಕೂ ಹೆಚ್ಚು ಭಕ್ತಾದಿಗಳು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಮಾಚಹಳ್ಳಿ ಗ್ರಾಮದ ಸಮೀಪಕ್ಕೆ ಬಂದ ಸಂದರ್ಭದಲ್ಲಿ, ಎದುರಿನಿಂದ ಬರುತ್ತಿದ್ದ ಕಾರಿಗೆ ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿ, ಚಾಲಕ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಅವರನ್ನು ತಕ್ಷಣ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 15ಕ್ಕೂ ಹೆಚ್ಚು ಭಕ್ತಾದಿಗಳಿಗೆ ಗಾಯಗಳಾಗಿವೆ. ಕೆಲವರಿಗೆ ತಲೆಗೆ ಪೆಟ್ಟು, ಕೈ-ಕಾಲು ಮುರಿತ, ಇನ್ನು ಕೆಲವರಿಗೆ ಸಣ್ಣಪುಟ್ಟ ಗೀರುಗಳು ಬಿದ್ದಿವೆ. ಗಾಯಾಳುಗಳನ್ನು ತಕ್ಷಣ ಮದ್ದೂರು ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಗಂಭೀರವಾಗಿರುವವರನ್ನು ಮಂಡ್ಯಕ್ಕೆ ಕಳುಹಿಸಲಾಗಿದೆ. ಗಾಯಾಳುಗಳಲ್ಲಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರೂ ಇದ್ದಾರೆ. ದುರ್ಘಟನೆಯ ಸುದ್ದಿ ತಿಳಿದ ತಕ್ಷಣ ಕೆಸ್ತೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬಸ್ ಮತ್ತು ಕಾರನ್ನು ವಶಕ್ಕೆ ಪಡೆದು, ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು, ಕಾರು ಚಾಲಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.


















