ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಚಿ.ಸೌಜನ್ಯ ಚಿತ್ರದ ಮೂಲಕ ಅವರು ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಅಭಿನಯಿಸಿದ್ದಾರೆ.
ಈ ಮೂಲಕ ಕನ್ನಡದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರವಿರುವ ನಿರ್ದೇಶಕಿಯರ ಸಾಲಿಗೆ ಹರ್ಷಿಕಾ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗೆ ಹರ್ಷಿಕಾ ಪೂಣಚ್ಛ ಅವರು ನಿರ್ದೇಶಿಸುತ್ತಿರುವ, ಕಂಸಾಳೆ ಫಿಲಂಸ್ ಹಾಗೂ ಭುವನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಧು ಮರಿಸ್ವಾಮಿ ಮತ್ತು ಭುವನ್ ಪೊನ್ನಣ್ಣ ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ ಇತ್ತೀಚೆಗಷ್ಟೇ ಅನಾವರಣಗೊಂಡಿತು. ದೇಶದಲ್ಲಿ ನಡೆದಿರುವ ಹಾಗೂ ನಡೆಯುತ್ತಿರುವ ಹೆಣ್ಣುಮಕ್ಕಳ ಶೋಷಣೆ ಕುರಿತು ಜಾಗೃತಿ ಮೂಡಿಸುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ “ಚಿ.ಸೌಜನ್ಯ” ಎಂದು ಹೆಸರಿಡಲಾಗಿದೆ. “ಒಂದು ಹೆಣ್ಣಿನ ಕಥೆ” ಎಂಬ ಅಡಿಬರಹ ಈ ಚಿತ್ರಕ್ಕಿದೆ. ಶೀರ್ಷಿಕೆ ಅನಾವರಣದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಭಾರತದಲ್ಲಿ ಪ್ರತಿವರ್ಷ ಮೂವತ್ತಾರು ಸಾವಿರಕ್ಕೂ ಅಧಿಕ ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ. ಸರಾಸರಿ ದಿನಕ್ಕೆ ನೂರು ಮಹಿಳೆಯರಂತೆ. ಈ ಅತ್ಯಾಚಾರಗಳ ಬಗ್ಗೆ ಕೇಸ್ ದಾಖಲಾಗುತ್ತದೆ. ವಿಚಾರಣೆ ನಡೆಯುತ್ತದೆ. ಆದರೆ ಆ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿರುವುದು ತೀರ ಕಡಿಮೆ. ನಾನು ಹಾಗೂ ಹರ್ಷಿಕಾ ಅವರು ಕೂಡ ಇಂತಹ ಘಟನೆ ಬಗ್ಗೆ ನಮಗೆ ತಿಳಿದಾಗ ಅ ಸ್ಥಳಕ್ಕೆ ಹೋಗಿ ಸಾವಿರಾರು ಜನರೊಂದಿಗೆ ಹೋರಾಟ ಮಾಡಿದ್ದೇವೆ. ಈ ವಿಷಯಗಳ ಕುರಿತು ಜನರಿಗೆ ಜಾಗೃತಿ ಮೂಡಿಸಲು ಸಿನಿಮಾ ಉತ್ತಮವಾದ ಮಾಧ್ಯಮ ಅನಿಸಿತು. ಹಾಗಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಸಮಾಜಕ್ಕೆ ಉತ್ತಮ ಸಂದೇಶವಿರುವ ಈ ಚಿತ್ರವನ್ನು ನಾನು ಹಾಗೂ ಮಧು ಮರಿಸ್ವಾಮಿ ಅವರು ಜಂಟಿಯಾಗಿ ನಿರ್ಮಿಸುತ್ತಿದ್ದೇವೆ. ಈ ಕಥೆಯನ್ನು ಕಿಶೋರ್ ಅವರ ಬಳಿ ಹೇಳಿದಾಗ ಕಥೆ ಕೇಳಿ, ನಟಿಸಲು ಒಪ್ಪಿಕೊಂಡರು ಎಂದು ಭುವನ್ ಪೊನ್ನಣ್ಣ ತಿಳಿಸಿದರು.
ಈ ಚಿತ್ರ ಐದು ಭಾಷೆಗಳಲ್ಲಿ ನಿರ್ಮಾಣವಾಗಲಿದೆ. ಕಿಶೋರ್, ಉಗ್ರಂ ಮಂಜು, ಕಾಕ್ರೋಜ್ ಸುಧೀ , ಯಶ್ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ.