ಅಮರಾವತಿ : ಕರ್ನಾಟಕ ಬಜೆಟ್ ಭಾಷಣದ ವೇಳೆ ಸಿಎಂ ಸಿದ್ದರಾಮಯ್ಯ ಅವರು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ ಘೋಷಣೆ ಮಾಡಿದ್ದರು. ಇದಾದ ಕೆಲವೇ ಹೊತ್ತಲ್ಲಿ ಆಂಧ್ರಪ್ರದೇಶ ಸರ್ಕಾರ 13 ವರ್ಷದ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಿ ಘೋಷಣೆ ಮಾಡಿದೆ.
ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು, 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ಬಗ್ಗೆ ಬಂದಿರುವ ಸಲಹೆಗಳನ್ನು ನಾವು ಸ್ವೀಕರಿಸಿದ್ದೇವೆ. ಖಂಡಿತವಾಗಿಯೂ, ಮುಂಬರುವ 90 ದಿನಗಳಲ್ಲಿ ಇದನ್ನೂ ನಾವು ಜಾರಿಗೆ ತರುತ್ತೇವೆ ಎಂದಿದ್ದಾರೆ.
ಸಾಮಾಜಿಕ ಜಾಲತಾಣ ನಿಷೇಧ 13 ವರ್ಷ ಅಥವಾ 16 ವರ್ಷವಾಗಿರಬೇಕೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಎಲ್ಲರೂ ಒಪ್ಪಿದರೆ, ಈ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಕರ್ನಾಟಕದಲ್ಲಿ ಸಾಮಾಜಿಕ ಜಾಲತಾಣ ನಿಷೇಧಿಸಿ ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. 2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದಿದ್ದರು. ಇದರ ಬೆನ್ನಲ್ಲೇ ಆಂಧ್ರದಲ್ಲಿ ಸಹ ಇದೇ ಕ್ರಮಕ್ಕೆ ಅಲ್ಲಿನ ಸರ್ಕಾರ ಮುಂದಾಗಿದೆ.
ಇದನ್ನೂ ಓದಿ : ಮನೆಗೆ ನುಗ್ಗಿ ವೃದ್ದೆಯ ಕತ್ತಲ್ಲಿದ್ದ ಚಿನ್ನದ ಸರ ಕದ್ದೊಯ್ದ ಕಳ್ಳ!



















