ಕನಕಪುರ: ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಮಹಿಳೆಯರು ಹಾಗೂ ಮಹಿಳಾ ಸಂಘಗಳ ಪಾತ್ರ ದೊಡ್ಡದಿದೆ. ಹೀಗಾಗಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಎಸ್. ಎಂ.ಕೃಷ್ಣ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಮೋಟಮ್ಮ ಅವರು ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳನ್ನು ಆರಂಭಿಸಿ, ಆರ್ಥಿಕ ಶಕ್ತಿ ನೀಡಿದರು. ಈಗ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದು ಮಹಿಳೆಯರ ಕಲ್ಯಾಣ ಕಾರ್ಯ ಮಾಡಲಾಗುತ್ತಿದೆ ಎಂದಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರನ್ನು ಸ್ವಾವಲಂಬಿಯನ್ನಾಗಿಸುವ ಉದ್ದೇಶ ನಮ್ಮದಾಗಿದೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಅನುಕೂಲಕರ ಮಾಡುವ ಸಲುವಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು ಎಂದಿದ್ದಾರೆ.