ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ ಹೆಸರಿನ ಭದ್ರತಾ ಪಡೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಿತು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಅಕ್ಕ ಪಡೆಗೆ ಚಾಲನೆ ನೀಡಿದರು.
ಅಕ್ಕ ಪಡೆ ಕಾರ್ಯವೈಖರಿ
ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯಗಳ ನಿಗ್ರಹ, ಕಾನೂನಿನ ಕುರಿತು ಜಾಗೃತಿ ಮೂಡಿಸಲು ಅಕ್ಕ ಪಡೆಯನ್ನು ರಚಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇತೃತ್ವದ ಈ ಉಪಕ್ರಮದಲ್ಲಿ ಪ್ರತಿ ಪಡೆಯಲ್ಲಿ ತರಬೇತಿ ಪಡೆದ ಪೊಲೀಸ್ ಸಿಬ್ಬಂದಿ ಮತ್ತು ಎನ್‌ಸಿಸಿ ಕೆಡೆಟ್‌ಗಳಿರಲಿದ್ದಾರೆ. ಈ ತಂಡ ಬಸ್ ನಿಲ್ದಾಣ, ಕಾಲೇಜು, ಹಾಸ್ಟೆಲ್, ಮಾಲ್‌ಗಳು ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗಲಿದೆ.
ಅಷ್ಟೇ ಅಲ್ಲದೆ, ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಸಂಚಾರ ನಿಯಮಗಳು, ಮಾದಕ ಪದಾರ್ಥಗಳ ಬಳಕೆಯ ಪರಿಣಾಮಗಳು, ತುರ್ತು ಸಹಾಯವಾಣಿಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು, ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವುದು, ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ತ್ವರಿತಗತಿಯಲ್ಲಿ ಬೆಂಬಲ ನೀಡುವುದು ಅಕ್ಕ ಪಡೆಯ ಮೂಲ ಉದ್ದೇಶ. ಅಲ್ಲದೇ ಸಮಾಜದಲ್ಲಿ ಸಹಾನುಭೂತಿ, ಸೇವಾ ಮನೋಭಾವನೆ ಹೊಂದಿರುವ ಮಹಿಳೆಯರಿಗೆ ವೇದಿಕೆ ಕಲ್ಪಿಸುವುದೂ ಸಹ ಅಕ್ಕ ಪಡೆಯ ಉದ್ದೇಶವಾಗಿದೆ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ : ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ | ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಕೀಚಕರು


















